

ಕೆ.ಆರ್.ನಗರ: ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಲಿನಗೊಳ್ಳುತ್ತಿದೆ ಎಂದು ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್ ಹೇಳಿದರು.
ಪಟ್ಟಣದ ಕೃಷಿ ಇಲಾಖೆ ಆವರಣದಲ್ಲಿ ಸೋಮವಾರ ಕೃಷಿ ಇಲಾಖೆ ಮತ್ತು ರೈತ ಉತ್ಪಾದಕ ಸಂಘದಿಂದ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರೂ ಒಂದು ಗಿಡ ನೆಡಬೇಕು. ಸಾಲು ಮರದ ತಿಮ್ಮಕ್ಕ ನಮಗೆಲ್ಲರಿಗೂ ಮಾದರಿಯಾಗಿದ್ದಾರೆ. ಗಿಡ-ಮರಗಳನ್ನು ಬೆಳೆಸುವ ಮೂಲಕ ತಿಮ್ಮಕ್ಕನ ಹಾದಿಯಲ್ಲಿ ನಡೆಯೋಣ ಎಂದರು.
ಪಟ್ಟಣ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡಲಾಗುತ್ತಿದೆ. ಸ್ವಚ್ಛತೆಗೆ ಆದ್ಯತೆ ನೀಡಿ ಸರ್ಕಾರ ನಿಗದಿ ಮಾಡಿರುವ ವಾಹನಗಳಲ್ಲಿ ಹಸಿ ಕಸ, ಒಣ ಕಸ ವಿಂಗಡಿಸಿ ಕೊಡಿ ಎಂದು ಮನವಿ ಮಾಡಿದರು.
ಪುರಸಭೆ ಸದಸ್ಯ ಕೋಳಿ ಪ್ರಕಾಶ್, ರೈತ ಉತ್ಪಾದಕ ಸಂಘದ ಅಧ್ಯಕ್ಷ ಎಲ್.ಪಿ.ರವಿಕುಮಾರ್, ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷ ಗರಡುಗಂಬ ಸ್ವಾಮಿ, ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ತಿಮ್ಮಪ್ಪ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ದಿವಾಕರ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪ್ರಸನ್ನ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್ ಹಾಜರಿದ್ದರು.