

ಹಾಸನ: ಬಡತನ ನಿರ್ಮೂಲನೆಗೆ ಶಾಸಕಾಂಗ ಹಾಗೂ ಕಾರ್ಯಾಂಗ ಕೆಲಸ ಮಾಡುತ್ತಿದೆ. ಸಂವಿಧಾನದ ಅಡಿಯಲ್ಲಿ ಕಾನೂನುಬದ್ಧವಾಗಿ ಎಲ್ಲಾ ಸೌಲಭ್ಯಗಳನ್ನು ಫಲಾನುಭವಿಗಳಿಗೆ ತಲುಪಿಸುವ ಪ್ರಾಮಾಣಿಕ ಕೆಲಸವನ್ನು ಕಾರ್ಯಾಂಗ ಮಾಡಬೇಕಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಟಿ.ಎನ್ ಇನವಳ್ಳಿ ತಿಳಿಸಿದರು.
ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಬಡತನ ನಿರ್ಮೂಲನೆ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ, ವಿವಿಧ ಸೌಲಭ್ಯಗಳ ಕುರಿತು ಬೃಹತ್ ಕಾನೂನು ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಆರ್ಥಿಕ ಸಮಾನತೆ ಎಂಬುದೇ ಸಂವಿಧಾನದ ಮೂಲ ಅಶಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯನಿರ್ವಹಿಸಬೇಕಿದೆ ಎಂದರು.
ಸೌಲಭ್ಯಗಳನ್ನು ಹೇಗೆ ಪಡೆಯಬೇಕು ಎಂಬುದರ ಬಗ್ಗೆ ಸಾರ್ವಜನಿಕರಿಗೆ ಅರಿವು ಇರಬೇಕು. ಇತ್ತೀಚಿನ ದಿನಗಳಲ್ಲಿ ಸೌಲಭ್ಯಗಳು ಇದ್ದರೂ ಅವುಗಳನ್ನು ಫಲಾನುಭವಿಗಳಿಗೆ ತಲುಪಿಸುವುದು ಸವಾಲಿನ ಕೆಲಸವಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್. ಪೂರ್ಣಿಮಾ ಮಾತನಾಡಿ, ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ. ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಹಾಗೂ ಆಶಾ ಕಾರ್ಯಕರ್ತೆಯರ ಸೇವೆ ಅನನ್ಯ. ಕೊರೋನ ನಿಯಂತ್ರಿಸುವ ಸಲುವಾಗಿ ಅವಿರತ ಶ್ರಮ ವಹಿಸಿರುವ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಆರೋಗ್ಯದ ಬಗ್ಗೆಯೂ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಶೇ.40 ರಷ್ಟು ಶಸ್ತ್ರ ಚಿಕಿತ್ಸೆ ಮೂಲಕ ಮಗುವಿಗೆ ಜನ್ಮ ನೀಡುವ ಪದ್ಧತಿ ಅನುಸರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಗರ್ಭಿಣಿಯರಿಗೆ ಅಗತ್ಯ ಮುಂಜಾಗ್ರತಾ ಕ್ರಮಗಳು ಹಾಗೂ ವೈದ್ಯಕೀಯ ಸಲಹೆಗಳನ್ನು ಪಡೆಯುವಂತೆ ಅರಿವು ಮೂಡಿಸಿ ಎಂದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಂಜುನಾಥ್ ಮಾತನಾಡಿ, ಸಮಾಜದಲ್ಲಿ ಹಿಂದುಳಿದ ಕಟ್ಟ ಕಡೆಯ ವ್ಯಕ್ತಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಕೆಲಸ ಮಾಡುತ್ತಿದೆ. ಶಾಲಾ- ಕಾಲೇಜು ಮಕ್ಕಳಿಗೆ ವಿದ್ಯಾರ್ಥಿ ವೇತನ, ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಸರಳ ವಿವಾಹವಾಗುವ ದಂಪತಿಗಳಿಗೆ 50 ಸಾವಿರ ರೂ. ಪ್ರೋತ್ಸಾಹ ದನ, ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ, ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ನಲ್ಲಿ ಉಚಿತ ಊಟ, ಹಾಸಿಗೆ, ಹೊದಿಕೆ, ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಸಮುದಾಯದ ಜನರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರವಿಕಾಂತ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುನೀತ್ ಸೇರಿದಂತೆ ಇತರರು ಇದ್ದರು.