ಫಲಿತಾಂಶ ಕುಸಿತ ಆತ್ಮಾವಲೋಕನದ ಸಮಯ

8 Dwd 6
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿದೆ. ಆದರೂ ಫಲಿತಾಂಶ ಸುಧಾರಣೆಯಾಗಿಲ್ಲ. ಈ ಬಗ್ಗೆ ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ರಾಜಕೀಯ ಬಿಟ್ಟು ಸರಿಯಾಗಿ ಕೆಲಸ ಮಾಡಿದರೆ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ನಗರದ ಜೆಎಸ್‌ಎಸ್ ಸನ್ನಿಧಿ ಸಭಾಭವನದಲ್ಲಿ ಜಿಲ್ಲಾಡಳಿತದಿಂದ ಮಂಗಳವಾರ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರದ ಸಮಾರೋಪ ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 100 ಫಲಿತಾಂಶ ಪಡೆದ ವಿದ್ಯಾರ್ಥಿಗಳು ಮತ್ತು ಶಾಲೆಗಳ ಮುಖ್ಯಾಧ್ಯಾಪಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಮನೆಯ ವಾತಾವರಣ, ಶಾಲೆ ಮತ್ತು ಸಮಾಜ ಮಕ್ಕಳ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಎಸ್‌ಡಿಎಂಸಿಗಳು ಮಕ್ಕಳ ಭವಿಷ್ಯ ಹಾಗೂ ಶೈಕ್ಷಣಿಕ ಪ್ರಗತಿಗಾಗಿ ಉತ್ತಮ ಕೆಲಸಮಾಡಬೇಕು. ಶಿಕ್ಷಕರು ಮಕ್ಕಳ ಕೌಶಲ ವೃದ್ಧಿಸಬೇಕು. ಸರ್ವತೋಮುಖ ಬೆಳವಣಿಗೆಗೆ ಭದ್ರ ಅಡಿಪಾಯ ಹಾಕಬೇಕು ಎಂದರು.

ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ಶಿಕ್ಷಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲು ಬದ್ಧವಾಗಿದೆ. ಅದರಂತೆ ಶಿಕ್ಷಕರು ಉತ್ತಮ ಶಿಕ್ಷಣ ನೀಡಿ ಫಲಿತಾಂಶ ಸುಧಾರಣೆಗೆ ಕೈ ಜೋಡಿಸಬೇಕು ಎಂದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಮಿಷನ್ ವಿದ್ಯಾಕಾಶಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಸಿಗದಿದ್ದರೂ ಸುಧಾರಣೆಗಿದೆ. ಈ ವರ್ಷ ಇನ್ನಷ್ಟು ಪ್ರಯತ್ನ ಮಾಡಿ ವಿದ್ಯಾಕಾಶಿಯ ಗತವೈಭವ ಮರಳಿಸಲು ಪ್ರಯತ್ನಿಸೋಣ ಎಂದರು.

ಶೇ. 100 ರಷ್ಟು ಫಲಿತಾಂಶ ಪಡೆದ ಶಾಲೆಗಳ ಮುಖ್ಯಾಧ್ಯಾಪಕರು ಹಾಗೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಚಿವ ಲಾಡ್ ಅವರು ತಮ್ಮ ಫೌಂಡೇಶನ್‌ನಿ0ದ ವಿದ್ಯಾರ್ಥಿಗಳಿಗೆ ತಲಾ 10,000 ರೂಪಾಯಿ ಪ್ರೋತ್ಸಾಹಧನ ನೀಡಿದರು.

ಹುಡಾ ಅಧ್ಯಕ್ಷ ಶಾಕೀರ ಸನದಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ, ಜಿ.ಪಂ. ಸಿಇಒ ಭುವನೇಶ ಪಾಟೀಲ ವೇದಿಕೆಯಲ್ಲಿದ್ದರು.

ಡಿಡಿಪಿಐ ಎಸ್.ಎಸ್. ಕೆಳದಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಎಂ. ಹುಡೆದಮನಿ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಽಕಾರಿಗಳು, ಪ್ರಾಥಮಿಕ, ಪ್ರೌಢಶಾಲೆಗಳ ಪ್ರಧಾನ ಗುರುಗಳು, ಎಸ್‌ಡಿಎಂಸಿ ಅಧ್ಯಕ್ಷರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net