

ಹಾಸನ: ಮುಖ್ಯಮಂತ್ರಿ ಉಪಸ್ಥಿತಿಯಲ್ಲಿ ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಫೆ.26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದು, ಜಿಲ್ಲೆಯ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅವರು ಕರೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಮೇಳಕ್ಕೆ ಎಲ್ಲಾ ವಲಯಗಳಿಂದ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್, ಮಧ್ಯಮ, ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸಲಿದ್ದು, ರಾಜ್ಯದ ಯುವಜನತೆಗೆ ಉದ್ಯೋಗಾವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಿಲ್ಲೆಯ ಎಲ್ಲಾ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನಸಿರ್ಂಗ್, ಪದವಿ, ಸ್ನಾತ್ತಕೋತ್ತರ, ಇಂಜಿನಿಯರಿಂಗ್ ವಿದ್ಯಾಸಂಸ್ಥೆಗಳಲ್ಲಿ 3 ವರ್ಷ ವಿದ್ಯಾಭ್ಯಾಸ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದ ಅವಕಾಶವನ್ನು ಬಳಸಿಕೊಳ್ಳುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಇದುವರೆಗೂ 548 ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡಿರುತ್ತಾರೆ. ಜಿಲ್ಲೆಯ ಎಲ್ಲಾ ಕಾಲೇಜಿನ ಪ್ರಾಂಶುಪಾಲರು ಮತ್ತು ಪ್ಲೇಸ್‌ಮೆಂಟ್ ಆಫೀಸರ್‌ಗಳಿಗೆ ಮಾಹಿತಿ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ನೋಂದಣಿ ಮಾಡಿಸಿ ಉದ್ಯೋಗ ಮೇಳದಲ್ಲಿ ಭಾಗವಹಿಸಲು ತಿಳಿಸಲಾಗಿದೆ. ಜಿಲ್ಲೆಯ ಎಲ್ಲೆಡೆ ಈ ಸಂಬಂಧ ಮಾಹಿತಿ ನೀಡಿ, ನಿರುದ್ಯೋಗಿಗಳು ಉದ್ಯೋಗ ಮೇಳಕ್ಕೆ ನೊಂದಾಯಿಸಿಕೊಳ್ಳುವಂತೆ ಹಾಗೂ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಕ್ರಮವಹಿಸುವಂತೆ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ತಿಳಿಸಲಾಗಿದೆ. ಅಂಗವಿಕಲರ ಕಲ್ಯಾಣ ಇಲಾಖೆಯ ವತಿಯಿಂದ ವಿಕಲಚೇತನ ಉದ್ಯೋಗಕಾಂಕ್ಷಿಗಳನ್ನು ಸಜ್ಜುಗೊಳಿಸಲಾಗಿದೆ ಎಂದರು.
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ತ್ಯಾಜ್ಯ ವಿಲೇವಾರಿ ಮಾಡುವ ವಾಹನಗಳಲ್ಲಿ ಶ್ರವ್ಯ ಮಾಧ್ಯಮದ ಮುಖಾಂತರ ಹಾಗೂ ಸ್ವಸಹಾಯ ಸಂಘಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದೆ. ಧ್ವನಿ ಸುರಳಿ, ಬಿತ್ತಿ ಪತ್ರಗಳು ಮತ್ತು ವಿಡಿಯೋ ತುಣುಕುಗಳ ಮೂಲಕ ಪ್ರಚಾರ ಮಾಡಲು ತಿಳಿಸಲಾಗಿದೆ. ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳು, ಜಿಲ್ಲಾಡಳಿತದ ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದೆ. ನಿರುದ್ಯೋಗಿ ಯುವಕ, ಯುವತಿಯರು ಇಲಾಖೆಯ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸಿ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಸಹಾಯವಾಣಿ ಸಂಖ್ಯೆ 18005999918 ಸಂಪರ್ಕಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಶಿವಕುಮಾರ್, ಸಹಾಯಕ ನಿರ್ದೇಶಕ ಕೃಷ್ಣೇಗೌಡ, ವಾರ್ತಾಧಿಕಾರಿ ಮೀನಾಕ್ಷಮ್ಮ ಮತ್ತಿತರರು ಉಪಸ್ಥಿತರಿದ್ದರು.