

ಗುಂಡ್ಲುಪೇಟೆ: ಅರಣ್ಯ ಇಲಾಖೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಂಡರೂ ಸಹ ಭಾನುವಾರ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಗುಡ್ಡದಲ್ಲಿ ಬೆಂಕಿ ಬಿದ್ದು ಹತ್ತಾರು ಎಕರೆ ಪ್ರದೇಶ ಭಸ್ಮವಾಗಿವೆ.
ಹುಲಿ ಯೋಜನೆಯ ಕುಂದಕೆರೆ ವಲಯದ ಕಣಿಯನಪುರ ಗುಡ್ಡದಲ್ಲಿ ಭಾನುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿತ್ತು. ಆರಂಭದಲ್ಲಿ ದಟ್ಟವಾದ ಹೊಗೆ ಆವರಿಸಿತ್ತು. ಇದನ್ನು ನೋಡಿದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ವಿಷಯ ತಿಳಿಸಿದರು. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದು, ಪರಿಸ್ಥಿತಿ ಹತೋಟಿಗೆ ಬಂದಿದೆ ಎಂದು ತಿಳಿಸಿದ್ದಾರೆ.