

ಮಳವಳ್ಳಿ: ತಾಲೂಕಿನ ನಾಗೇಗೌಡನದೊಡ್ಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಹಿಂಬದಿ ಸವಾರನೊಬ್ಬ ಮೃತಪಟ್ಟಿದ್ದಾನೆ.
ನಾಗೇಗೌಡನದೊಡ್ಡಿ ಗ್ರಾಮದ ಶಿವಮಲ್ಲು(62) ಮೃತರು. ಇವರು ಸ್ನೇಹಿತರೊಬ್ಬರ ಬೈಕ್‌ನಲ್ಲಿ ಮಳವಳ್ಳಿ ಕಡೆಗೆ ಬರುತ್ತಿದ್ದಾಗ ನಾಗೇಗೌಡನದೊಡ್ಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಶಿವಮಲ್ಲು ಅವರು ತೀವ್ರವಾಗಿ ಗಾಯಗೊಂಡರು. ಕೂಡಲೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಎರಡು ಬೈಕ್‌ಗಳ ಸವಾರರಿಗೂ ಸಣ್ಣ-ಪುಟ್ಟ ಗಾಯಗಳಾಗಿದ್ದು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಶವ ನೀಡಲಾಯಿತು. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.