

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ನಲ್ಲಿ ಸರ್ವರಿಗೂ ಸಮಪಾಲು ನೀಡಲಾಗಿದೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಕೆ.ರವಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರದೃಷ್ಟಿ ಇಟ್ಟು ಅಭಿವೃದ್ಧಿ ಪರ ಬಜೆಟ್ ಮಂಡಿಸಿದ್ದಾರೆ. ಕೃಷಿ ಶಿಕ್ಷಣ, ನೀರಾವರಿ, ಸಮಾಜಕಲ್ಯಾಣ ಸೇರಿದಂತೆ ಎಲ್ಲ ಇಲಾಖೆಗಳಿಗೂ ಹೆಚ್ಚಿನ ಅನುದಾನ ನೀಡಿರುವುದು ಗಮನಾರ್ಹವಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಈಜು ಕೊಳ ನಿರ್ಮಾಣ, ಹನೂರು ತಾಲೂಕಿನಲ್ಲಿ ಪ್ರಜಾಸೌಧ ನಿರ್ಮಾಣ, ಆದಿವಾಸಿ ಮಕ್ಕಳಿಗೆ ದ್ವಿತೀಯ ಪಿಯುಸಿ ವರೆಗೂ ವಸತಿಯುತ ಶಿಕ್ಷಣ, ರಾಮಾಪುರ ರಸ್ತೆ ಅಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳಿಗೆ ಹಸಿರು ನಿಶಾನೆ ತೋರಿರುವುದು ಆಶಾದಾಯಕವಾಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಎಸ್.ಸಿಮಹಾದೇವಪ್ಪ ಹಾಗೂ ಜಿಲ್ಲೆಯ ಕಾಂಗ್ರೆಸ್ ಶಾಸಕರನ್ನು ಅಭಿನಂದಿಸಿದ್ದಾರೆ.