

ಹೊಳೆನರಸೀಪುರ: ಭೂ ಸುಧಾರಣಾ ಕಾಯ್ದೆ ಜಾರಿಗೊಳಿಸುವ ಮೂಲಕ 8 ಲಕ್ಷ ಗೇಣಿದಾರರಿಗೆ ಭೂಮಾಲೀಕರಿಂದ ಭೂಮಿ ಕೊಡಿಸುವಲ್ಲಿ ಡಿ.ದೇವರಾಜ ಅರಸು ಪ್ರಮುಖ ಪಾತ್ರ ವಹಿಸಿದ್ದರು ಎಂದು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದೇವರಾಜು ತಿಳಿಸಿದರು.
ತಾಲೂಕು ಆಡಳಿತದಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಗಳಾಗಿದ್ದಾಗ ಜೀತ ಪದ್ಧತಿ ನಿರ್ಮೂಲನೆ, ಋಣಮುಕ್ತ ಕಾಯ್ದೆಯನ್ನು ಜಾರಿಗೆ ತಂದು ಸಾಲ ಮನ್ನಾ ಮಾಡಿ ಬಡ ಜನತೆಗೆ ಅನುಕೂಲ ಮಾಡಿದರು. ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ವಿದ್ಯಾರ್ಥಿನಿಲಯಗಳನ್ನು ರಾಜ್ಯಾದ್ಯಂತ ತೆರೆದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ದೀಪವಾದರು ಎಂದು ನೆನೆದರು.
ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರು ಜಾರಿಗೆ ತಂದಂತಹ 20 ಅಂಶಗಳ ಕಾರ್ಯಕ್ರಮವನ್ನು ಯಥಾವತ್ತಾಗಿ ಅನುಷ್ಠಾನಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ನೀರಾವರಿ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಮಾಡಿದ ಅರಸು ಅವರು ಅಂದಿನ ವಿರೋಧ ಪಕ್ಷದ ನಾಯಕರ ಮೆಚ್ಚುಗೆಗೂ ಪಾತ್ರರಾದರು. 1969ರಿಂದ 1979ರವರೆಗೆ ಅರಸು ಯುಗ ಎಂದೆ ಮನೆ ಮಾತಾಗಿದೆ. ಕನ್ನಡ ನಾಡು ನುಡಿಗೆ ಹೆಚ್ಚು ಒತ್ತು ನೀಡಿದ ಅವರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಲು ಕಾರಣೀಭೂತರಾದರು ಎಂದು ನುಡಿದರು.
ತಹಸೀಲ್ದಾರ್ ವೈ.ಎಂ.ರೇಣು ಕುಮಾರ್ ಮಾತನಾಡಿ, ಅಹಿಂದ ವರ್ಗಕ್ಕೆ ಅರಸು ಅವರ ಕೊಡುಗೆ ಅಪಾರ. ವಿದ್ಯಾರ್ಥಿಗಳು ಅವರ ಸೇವೆಯನ್ನು ಸದಾ ಸ್ಮರಿಸುವುದರ ಮೂಲಕ ತಮ್ಮ ಬದುಕನ್ನು ಮಾದರಿಯಾಗಿ ರೂಪಿಸಿಕೊಳ್ಳಬೇಕು ಎಂದರು.
ಅರಸು ಅವರು ಸ್ಥಾಪನೆ ಮಾಡಿರುವ ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕ್ರೀಡಾಕೂಟಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ.ಲಕ್ಷ್ಮಣ, ಆರಕ್ಷಕ ವೃತ್ತ ನಿರೀಕ್ಷಕ ಪ್ರದೀಪ್, ವಿವಿಧ ಇಲಾಖೆ ಅಧಿಕಾರಿಗಳಾದ ಸೋಮಶೇಖರ್, ಧನಲಕ್ಷ್ಮೀ, ಪ್ರೇಮಾ ಉಪಸಿತರಿದ್ದರು.