ಬಸವೇಶ್ವರ ದೇಗುಲ ಉದ್ಘಾಟನೆ ಕಾರ್ಯಕ್ರಮ

26M.D.R.1. marasinganahalli
Published on

ಮದ್ದೂರು: ತಾಲೂಕಿನ ಮಾರಸಿಂಗನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಬಸವೇಶ್ವರಸ್ವಾಮಿ ದೇವರ ದೇಗುಲ, ವಿಗ್ರಹ ಪ್ರತಿಷ್ಠಾಪನೆ ಹಾಗೂ ವಿಮಾನಗೋಪುರ, ಕಲಶರೋಹಣ ಉದ್ಘಾಟನಾ ಸಮಾರಂಭವನ್ನು ಆ. 27 ಮತ್ತು 28ರಂದು ಹಮ್ಮಿಕೊಳ್ಳಲಾಗಿದೆ ಎಂದು ನಿವೃತ ಕಾರ್ಯಪಾಲಕ ಇಂಜಿನಿಯರ್ ರಾಮಸ್ವಾಮಿ ಹಾಗೂ ಮಕ್ಕಳ ತಜ್ಞ ಡಾ.ಎಂ.ಸಿ. ಸೋಮಶೇಖರ್ ತಿಳಿಸಿದ್ದಾರೆ.


ಮಾರಸಿಂಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಸ್ವಾಮಿ ನೂತನ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನೆ, ವಿಮಾನಗೋಪುರ ಕಲಶರೋಹಣ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಸಂಸದೆ ಸುಮಲತಾ ಅಂಬರೀಷ್, ಶಾಸಕರಾದ ಕೆ.ಎಂ. ಉದಯ್, ದಿನೇಶ್ ಗೂಳಿಗೌಡ, ಮಧು ಜಿ. ಮಾದೇಗೌಡ, ಮರಿತಿಬ್ಬೇಗೌಡ, ಮಾಜಿ ಸಚಿವ ಡಿ.ಸಿ. ತಮ್ಮಣ್ಣ, ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆ. 27ರ ಸಂಜೆ ಮೀಸಲು ನೀರು ತರುವ ಮೂಲಕ ದೇವರ ಕಾರ್ಯಗಳು ಪ್ರಾರಂಭವಾಗಲಿವೆ. ದೇಗುಲದ ಆವರಣದಲ್ಲಿ ಹೋಮ, ಹವನಗಳು ನಡೆಯಲಿವೆ. ದೇಗುಲವನ್ನು ತಳಿರು, ತೋರಣಗಳಿಂದ ಸಿಂಗರಿಸಲಾಗಿದೆ. ಆ. 28 ರಂದು ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸಲಿದ್ದು, ಮಧ್ಯಾಹ್ನ 12 ಗಂಟೆಗೆ ಅನ್ನ ಸಂತರ್ಪಣೆ ನಡೆಯಲಿದ್ದು, ಸಾವಿರಾರು ಭಕ್ತರು ಭಾಗವಹಿಸಲಿದ್ದಾರೆ ಎಂದರು.


ಮಕ್ಕಳ ತಜ್ಞ ಡಾ. ಎಂ.ಸಿ. ಸೋಮಶೇಖರ್ ಮಾತನಾಡಿ, ಮಾರಸಿಂಗನಹಳ್ಳಿ ಗ್ರಾಮದಲ್ಲಿ ಹಲವು ದೇಗುಲಗಳಿದ್ದು, ವಿಧಿ ವಿಧಾನಗಳಂತೆ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಹಲವು ದಿನಗಳಿಂದ ಮಾರಸಿಂಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರಸ್ವಾಮಿ ದೇಗುಲವನ್ನು ನಿರ್ಮಾಣ ಮಾಡಬೇಕು ಎಂಬ ಆಶಯವಿತ್ತು, ಅದರಂತೆ ನೂತನ ದೇಗುಲ ನಿರ್ಮಾಣಗೊಂಡು ಉದ್ಘಾಟನೆಗೆ ಸಿದ್ಧವಾಗಿದೆ. ಮಾರಸಿಂಗನಹಳ್ಳಿ ಸೇರಿದಂತೆ ಅಕ್ಕಪಕ್ಕದ ಅಪಾರ ಭಕ್ತರು ದೇಗುಲ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net