ಬಸ್ ಸೌಕರ್ಯಕ್ಕೆ ಅಬ್ಬಿಗೇರಿ ವಿದ್ಯಾರ್ಥಿಗಳ ಆಗ್ರಹ

15Naregal3
ನರೇಗಲ್ಲ ಸಮೀಪದ ಅಬ್ಬಿಗೇರಿ ಗ್ರಾಮದ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಲು ಅವಕಾಶ ನೀಡುವಂತೆ ಮನವಿ ಸಲ್ಲಿಸಿಲು ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ್ದರು.
Published on

ನರೇಗಲ್ಲ: ಸಮೀಪದ ಅಬ್ಬಿಗೇರಿ ಗ್ರಾಮಕ್ಕೆ ಸರಿಯಾದ ಸಮಯಕ್ಕೆ ಬಸ್ ಬಾರದ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಸಾರಿಗೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಆರೊಪಿಸಿ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.

ನರೇಗಲ್ಲ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ನೂರಾರ ವಿದ್ಯಾರ್ಥಿಗಳು, ಸಾರಿಗೆ ಸಂಸ್ಥೆ ಅಧಿಕಾರಿಗಳ ವಿರುದ್ಧ ಘೊಷಣೆ ಕೂಗಿ ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಸಾರಿಗೆ ನಿಯಂತ್ರಕ ‘ನೀವು ಪ್ರತಿಭಟನೆ ಮಾಡಲು ಪೊಲೀಸ್ ಇಲಾಖೆಯಿಂದ ಪರವಾನಗಿ ಪಡೆಯಬೇಕು. ಏಕಾಏಕಿ ಪ್ರತಿಭಟನೆ ಮಾಡುವಂತಿಲ್ಲ’ ಎಂದರು. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಪೊಲೀಸ್ ಠಾಣೆಗೆ ಹೋಗಿ ಸಮಸ್ಯೆ ತಿಳಿಸಿ ಪ್ರತಿಭಟನೆಗೆ ಅವಕಾಶ ನೀಡುವಂತೆ ಮನವಿ ಸಲ್ಲಿಸಿದರು.

100ಕ್ಕೂ ಅಧಿಕ ವಿದ್ಯಾರ್ಥಿಗಳು ಅಬ್ಬಿಗೇರಿ ಗ್ರಾಮದಿಂದ ನರೇಗಲ್ಲಗೆ ಬರುತ್ತಾರೆ. ಆದರೆ, ಬೆಳಗ್ಗೆ ಒಂದು ಬಸ್ ಮಾತ್ರ ಬರುತ್ತದೆ. ಅದರಲ್ಲಿ, ಇತರೆ ಪ್ರಯಾಣಿಕರಿಗೆ ಆದ್ಯತೆ ನೀಡುತ್ತಿದ್ದು, ವಿದ್ಯಾರ್ಥಿಗಳನ್ನು ಕಡೆಗಣನೆ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಬಸ್ ಹತ್ತುವಾಗ ಇತರೆ ಸಾರ್ವಜನಿಕರು ಬಂದಲ್ಲಿ. ಅವರನ್ನು ಮೊದಲು ಹತ್ತಿಸಿಕೊಂಡು, ಸ್ಥಳ ಉಳಿದರೆ ಮಾತ್ರ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ನರೇಗಲ್ಲ ಠಾಣೆ ಪಿಎಸ್​ಐ ಕಿರಣಕುಮಾರ.ಕೆ. ವಿದ್ಯಾರ್ಥಿಗಳಿಗೆ ಸಮಾಧಾನಪಡಿಸಿ ಸಾರಿಗೆ ಅಧಿಕಾರಿಗಳೊಂದಿಗೆ ಮಾತನಾಡಿ, ಸರಿಯಾದ ಸಮಯಕ್ಕೆ ಬಸ್ ಸೌಕರ್ಯ ಕಲ್ಪಿಸುವಂತೆ ತಿಳಿಸಲಾಗುತ್ತದೆ ಎಂದರು. ಪದೇಪದೆ ಬಸ್ ಸೇವೆಯಲ್ಲಿ ವ್ಯತ್ಯಯ ಆಗುತ್ತಿದ್ದು, ಮುಂದಿನ ದಿನಗಳಲ್ಲಿ ಅದು ಮರುಕಳಿಸಿದಲ್ಲಿ ಪ್ರತಿಭಟನೆ ಅನಿವಾರ್ಯ ಎಂದು ವಿದ್ಯಾರ್ಥಿಗಳು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net