ಬಸ್ ಸೌಲಭ್ಯ ಕಲ್ಪಿಸದಿದ್ದರೆ ಧರಣಿ

14 joida 01
Published on

ಜೊಯಿಡಾ: ತಾಲೂಕಿನ ದಿಗಲಂಬ- ಅಮಶೇತ ಗ್ರಾಮಗಳಿಗೆ ಕೂಡಲೆ ಬಸ್ ಸಂಚಾರ ಸೌಲಭ್ಯ ಕಲ್ಪಿಸಬೇಕು. ಇಲ್ಲವಾದಲ್ಲಿ ಜ. 28ರಿಂದ ಬೇಡಿಕೆ ಈಡೇರುವ ತನಕ ನಿತ್ಯ ಜೊಯಿಡಾ ಬಸ್ ನಿಲ್ದಾಣದಲ್ಲಿನ ಸಂಚಾರ ನಿಯಂತ್ರಕರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಬಸ್ ಸಂಚಾರ ಸೌಲಭ್ಯ ಕುರಿತು ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ಸಂಜೀವ ಭಜಂತ್ರಿ ಅವರಿಗೆ ಮಂಗಳವಾರ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಬಸ್ ಸಂಚಾರ ಕಲ್ಪಿಸುವ ಕುರಿತು ಗಂಗೋಡಾ ಗ್ರಾಮ ಪಂಚಾಯಿತಿಯ ಠರಾವಿನೊಂದಿಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿದ ಅವರು ಕೂಡಲೆ ಕ್ರಮ ಕೈಗೊಳ್ಳುವಂತೆ ಧಾರವಾಡದ ವಿಭಾಗೀಯ ನಿಯಂತ್ರಣಾಧಿಕಾರಿ (ಡಿಸಿ)ಗೆ ಸೂಚಿಸಿದ್ದರು. ಆದರೆ, ರಸ್ತೆ ಕಿರಿದಾಗಿದ್ದು, ಬಸ್ ಸಂಚಾರಕ್ಕೆ ಯೋಗ್ಯವಿಲ್ಲ ಎಂದು ವರದಿ ನೀಡಿದ್ದಾರೆ. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಕಳೆದ ಸಾಲಿನಲ್ಲಿ 6. 45 ಕೋಟಿ ರೂ. ವೆಚ್ಚದಲ್ಲಿ ರಸ್ತೆ ದುರಸ್ತಿಪಡಿಸಲಾಗಿದೆ. ಹಾಗಾದರೆ ಯೋಜನೆ ಪ್ರಕಾರ ಕಾಮಗಾರಿ ನಡೆದಿಲ್ಲವೇ? ಅಥವಾ ಸಾರಿಗೆ ಇಲಾಖೆ ಅಧಿಕಾರಿಗಳು ಸುಳ್ಳು ಹೇಳುತ್ತಿದ್ದಾರೆಯೇ? ಎಂಬುದನ್ನು ಪರಿಶೀಲಿಸಿ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು. ಇಲ್ಲವಾದರೆ ಬೇಡಿಕೆ ಈಡೇರುವ ತನಕ ಪ್ರತಿ ದಿನ ಬೆಳಗ್ಗೆ 9 ರಿಂದ ಸಂಜೆ 6 ಗಂಟೆ ವರೆಗೆ ಸಂಚಾರ ನಿಯಂತ್ರಕರ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net