ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

IMG-20221223-WA0060
Published on


ಹಾಸನ : ಬಸ್ ಸೌಲಭ್ಯಕ್ಕೆ ಒದಗಿಸಿಕೊಡುವಂತೆ ಆಗ್ರಹಿಸಿ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ನೇತೃತ್ವದಲ್ಲಿ ಹೊಳೆ ನರಸೀಪುರ ಪಟ್ಟಣದ ಕೆಎಸ್‌ಆರ್‌ಟಿಸಿ ಡಿಪೋ ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು.


ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಿಂದ ಪಟ್ಟಣದ ಸಾರಿಗೆ ಸಂಸ್ಥೆಯ ಘಟಕದವರೆಗೆ ಮೆರವಣಿಗೆ ತೆರಳಿದ ವಿದ್ಯಾರ್ಥಿಗಳು ಶೀಘ್ರ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿದರು. ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸುಪ್ರೀತ್ ಮಾತನಾಡಿ, ಬಸ್‌ಗಳು ನಿಗದಿತ ಸಮಯಕ್ಕೆ ಬಾರದ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ತೆರಳಲು ಆಗುತ್ತಿಲ್ಲ. ಸಂಜೆಯೂ ಕಾಲೇಜಿನಿಂದ ಮನೆಗೆ ಬರಲು ಸಾಧ್ಯವಾಗುತ್ತಿಲ್ಲ. ಪ್ರಯಾಣಿಕರು ತುಂಬಿರುವ ಬಸ್‌ಗಳಲ್ಲಿ ಚಾಲಕರು ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ಕೂಡಲೇ ಬಸ್ ಸೌಲಭ್ಯ ಕಲ್ಪಿಸಲು ಸಂಬಂಧಪಟ್ಟ ಇಲಾಖೆ ಮುಂದಾಗಬೇಕು ಎಂದು ಒತ್ತಾಯಿಸಿದರು.


ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಮಾತನಾಡಿದ ಘಟಕ ವ್ಯವಸ್ಥಾಪಕ ಪಾಪ ನಾಯಕ್, ಹೆಚ್ಚುವರಿಯಾಗಿ ಐದು ಬಸ್‌ಗಳನ್ನು ಒದಗಿಸಿಕೊಡುವಂತೆ ಘಟಕದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು. ಎನ್‌ಎಸ್‌ಯುಐ ಮುಖಂಡ ಎಚ್.ಎಸ್.ಮುರಳಿ, ಚೇತನ್, ಯೋಗೇಶ, ಪವನ್, ಜೀವನ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net