

ಆಲೂರು: ಸೂಕ್ತ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ತಾಲೂಕಿನ ಕಾರ್ಜುವಳ್ಳಿ ಕೂಡಿಗೆ ಗ್ರಾಮದಲ್ಲಿ ಗುರುವಾರ ಸಾರಿಗೆ ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ವಾಟೆಹೊಳೆ ಬಿಕ್ಕೋಡು ಮಾರ್ಗವಾಗಿ ಸಂಚರಿಸುವ ಬಸ್‌ಗಳು ಸರಿಯಾದ ಸಮಯಕ್ಕೆ ಬಾರದ ಕಾರಣ ತರಗತಿಗಳಿಗೆ ಹಾಜರಾಗಲು ತೊಂದರೆಯಾಗುತ್ತಿದೆ. ಈ ಸಮಸ್ಯೆ ಪರಿಹಾರಕ್ಕೆ ಸಾರಿಗೆ ಸಂಸ್ಥೆಯ ಆಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಉಪಯೋಗವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ನಿಗಮದ ವ್ಯವಸ್ಥಾಪಕ ಮಂಜುನಾಥ್, ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ನಿತ್ಯ ಸರಿಯಾದ ಸಮಯಕ್ಕೆ ಬಸ್‌ಗಳನ್ನು ನಿಗದಿಪಡಿಸುವುದಾಗಿ ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.
ಪ್ರತಿಭಟನೆಯಲ್ಲಿ ಕಾರ್ಜುವಳ್ಳಿ ಕೂಡಿಗೆ, ಕಾಮತಿ, ತಾಳೂರು ಗುಡ್ಡೇನಹಳ್ಳಿ ಸೇರಿದಂತೆ ಅನೇಕ ಗ್ರಾಮಗಳ ಶಾಲಾ, ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.