

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯನ್ನು ಭ್ರಷ್ಟಾಚಾರ ಮುಕ್ತ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚಿಸಿದರು.
ಜಿಲ್ಲಾ ಪಂಚಾಯತ ನೂತನ ಸಭಾಂಗಣದಲ್ಲಿ ಶುಕ್ರವಾರದಂದು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಲೋಕಾಯುಕ್ತ ಪ್ರಕರಣಗಳ ವಿಲೇವಾರಿ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು,
ಸರಕಾರವು ಜನಸಾಮಾನ್ಯರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿ ಅದಕ್ಕೆ ಸಾಕಷ್ಟು ಅನುದಾನವನ್ನು ಕೂಡಾ ಒದಗಿಸುತ್ತಿದೆ. ಸರಕಾರದ ಯೋಜನೆ ಹಾಗೂ ಅನುದಾನವನ್ನು ಸಮರ್ಪಕ ಹಾಗೂ ಪ್ರಾಮಾಣಿಕವಾಗಿ ಅರ್ಹರಿಗೆ ತಲುಪಿಸುವುದು ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯವಾಗಿದೆ. ಒಂದು ವೇಳೆ ಅಧಿಕಾರಿ, ಸಿಬ್ಬಂದಿ ಭ್ರಷ್ಟಾಚಾರ ನಡೆಸಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಮುಲಾಜಿಲ್ಲದೆ ಶಿಸ್ತುಕ್ರಮ ವಹಿಸಲಾಗುವುದು ಎಂದರು.
ಜಿಲ್ಲೆಯ ಆಡಳಿತದಲ್ಲಿ ಜನಪರ ಕಾಳಜಿ, ಚಾಕಚಕ್ಯತೆ ಇದ್ದರೆ ರಾಜ್ಯದ ಅಭಿವೃದ್ಧಿಯಲ್ಲಿ ದೊಡ್ಡ ಕೊಡುಗೆ ನೀಡಿದಂತಾಗುತ್ತದೆ. ಜೊತೆಗೆ ಸರಕಾರದ ಅನುದಾನ ಅರ್ಹರಿಗೆ ಪ್ರಾಮಾಣಿಕವಾಗಿ ತಲುಪಿಸಿದಲ್ಲಿ ಜನರ ಜೀವನ ಮಟ್ಟ ಸುಧಾರಣೆಯಾಗುತ್ತದೆ ಎಂದರು.
ಸರ್ಕಾರಿ ನೌಕರರಿಗೆ ಸರಕಾರವು ಅನೇಕ ಸವಲತ್ತುಗಳನ್ನು ನೀಡಿದೆ ಅದರಲ್ಲಿ ಉತ್ತಮ ಜೀವನ ಸಾಗಿಸಬಹುದಾಗಿದೆ. ಆದರೆ ಕೆಲ ಅಧಿಕಾರಿಗಳು, ಸಿಬ್ಬಂದಿ ಅತಿ ಆಸೆಗಾಗಿ ಭ್ರಷ್ಟಾಚಾರದಲ್ಲಿ ತೊಡಗುತ್ತಿರುವ ಕುರಿತು ದೂರಗಳು ಬಂದಿದ್ದು, ಭ್ರಷ್ಟಾಚಾರ ಸಾಬೀತಾದಲ್ಲಿ ಅಂತಹ ಅಧಿಕಾರಿ, ಸಿಬ್ಬಂದಿ ವಿರುದ್ಧ ನಿರ್ದಾಕ್ಷಣ್ಯವಾಗಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿಗೆ ಅವರದೇ ಆದಂತಹ ಕಾರ್ಯಗಳನ್ನು ವರ್ಗೀಕರಣ ಮಾಡಿ ಕೊಡಲಾಗಿರುತ್ತದೆ. ಈ ಕಾರ್ಯ ಪರೀಶಿಲನೆಗಾಗಿ ಮೇಲುಸ್ತುವಾರಿಯನ್ನು ನೇಮಿಸಲಾಗಿದ್ದರೂ ಸಹ ಸರಕಾರಿ ಕಾರ್ಯಗಳು ಸುಗಮವಾಗಿ ಸಾಗುತ್ತಿಲ್ಲ. ಒಬ್ಬ ವ್ಯಕ್ತಿ ಒಂದೇ ಕೆಲಸದ ವೇಳೆ ಪದೇ ಪದೇ ಕಚೇರಿಗೆ ಆಗಮಿಸುತ್ತಾನೆ ಎಂದರೆ ಕಚೇರಿಯಲ್ಲಿ ಕೆಲಸಗಳು ಸುಗಮವಾಗಿ ಸಾಗುತ್ತಿಲ್ಲ ಎಂದರ್ಥವಾಗುತ್ತದೆ. ಅಧಿಕಾರಿಗಳು ಮತ್ತು ಸಿಬ್ಬಂದಿ ದುರಾಸೆಗೊಳಗಾಗಿ ತಾವು ಮಾಡುವ ತಪ್ಪಿಗೆ ತಮ್ಮ ಇಡೀ ಕುಟುಂಬ, ಹೆಂಡತಿ ಮಕ್ಕಳನ್ನು ಮುಜುಗುರಕ್ಕೆ ತಳ್ಳುತ್ತಾರೆ. ನಾವು ಬೆಳೆದ ಬಂದ ಹಾದಿಯಲ್ಲಿ, ತಂದೆ ತಾಯಿಯರ ಮಾರ್ಗದರ್ಶನದಲ್ಲಿ ಸಂಸ್ಕಾರ ಪ್ರಜ್ಞೆಯೊಂದಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು.
ಸರಕಾರಿ ಅಧಿಕಾರಿ, ಸಿಬ್ಬಂದಿಗಳು ಕಾನೂನು ಪ್ರಕಾರ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸದಲ್ಲಿ ಮಾತ್ರ ಜನ ಸೇವಕನಾಗುತ್ತಾನೆ. ಆಗ ಸರಕಾರಿ ಕೆಲಸ ದೇವರ ಕೆಲಸ ಎಂಬ ಸಂದೇಶಕ್ಕೆ ನ್ಯಾಯ ಒದಗಿಸಿದಂತಾಗುತ್ತದೆ ಎಂದರು.
ಸಾರ್ವಜನಿಕ ಸೇವೆಯಲ್ಲಿ ಇರುವ ಪ್ರತಿಯೊಬ್ಬರು ಲೋಕಾಯುಕ್ತ ಕಾಯ್ದೆಯ ಬಗ್ಗೆ ಅರಿವು ಹೊಂದಿರಬೇಕು. ಈ ಕಾಯ್ದೆಯಡಿ ಸಾರ್ವಜನಿಕ ಸೇವೆಯಲ್ಲಿ ಕಾರ್ಯನಿರ್ವಹಿಸುವವರು ಮಾಡುವ ತಪ್ಪು ಸಣ್ಣದಾಗಲಿ ದೊಡ್ಡದಾಗಲಿ ಅದಕ್ಕೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಅವರು ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿನ ಕೆರೆಗಳ ರಕ್ಷಣೆ ಹಾಗೂ ಸೂಕ್ತ ನಿರ್ವಹಣೆಯಾಗಬೇಕು. ಇವುಗಳ ಸೂಕ್ತ ನಿರ್ವಹಣೆ ಹಾಗೂ ರಕ್ಷಣೆ ಮಾಡುವದು ಸಂಬಂಧಿಸಿದ ಅಧಿಕಾರಿಯ ಮೂಲಭೂತ ಕರ್ತವ್ಯವಾಗಿದೆ. ಈ ಕುರಿತು ಲೋಕಾಯುಕ್ತ ಸಂಸ್ಥೆಯಲ್ಲಿ ಪ್ರಕರಣಗಳು ದಾಖಲಾಗಿದ್ದು ಇದನ್ನು ಗಂಭೀರಾವಗಿ ಪರಿಗಣಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯ ನಗರಗಳನ್ನು ಸ್ವಚ್ಛವಾಗಿ ಇಡುವದು ಮುಖ್ಯವಾಗಿದೆ. ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಿ, ಜಿಲ್ಲೆಯ ಸಾಕಷ್ಟು ಸರಕಾರಿ ಆಸ್ಪತ್ರೆಗಳಲ್ಲಿನ ವ್ಯವಸ್ಥೆ ಸರಿಯಾಗಿಲ್ಲ. ಆದರೂ ಬೆರಳಣಿಕೆಯಷ್ಟು ಆಸ್ಪತ್ರೆಗಳು ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡುತ್ತಿವೆ, . ಬಡ ಜನರಿಗೆ ಉಚಿತ ಹಾಗೂ ಉತ್ತಮ ಆರೋಗ್ಯ ಸೇವೆ ನೀಡುವಂತಹ ಸರ್ಕಾರಿ ಆಸ್ಪತ್ರೆಗಳ ಪರಿಸ್ಥಿತಿ ಹೆಚ್ಚಿನ ಸಂಖ್ಯೆಯಲ್ಲಿ ಶೋಚನೀಯವಾಗಿರುವದು ಕಳವಳಕಾರಿಯಾದ ಸಂಗತಿಯಾಗಿದೆ ಎಂದರು.
ಜಿಲ್ಲೆಯಲ್ಲಿನ ಸರಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಂಖ್ಯೆ, ಸಿಬ್ಬಂದಿಗಳ ವಿವರ, ಜೌಷಧಿಗಳ ದಾಸ್ತಾನಿನ ಮಾಹಿತಿಯನ್ನು ಜಿಲ್ಲಾ ಆರೋಗ್ಯಾಧಿಕಾರಿಗೆ ಒದಗಿಸಲು ತಿಳಿಸಿದ ಅವರು ಈ ಭಾಗದ ಅನಧಿಕೃತ ಮಧ್ಯ ಮಾರಾಟಗಾರರ ಮೇಲೆ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಅಬಕಾರಿ ಇಲಾಖೆ ಅಧಿಕಾರಿಗೆ ಸೂಚಿಸಿದರು.
ಸಭೆಯಲ್ಲಿ ಲೋಕಾಯುಕ್ತ ಕಾರ್ಯದರ್ಶಿ ಶ್ರೀನಾಥ ಕೆ. ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ ಋತ್ರಿನ್, ಬಾಗಲಕೋಟೆ ಲೋಕಾಯುಕ್ತ ಎಸ್ ಪಿ ಮಲ್ಲೇಶ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾಂತೇಶ ಜಿದ್ದಿ ಸೇರಿದಂತೆ ಇತರರು ಇದ್ದರು.