ಬಾನು ಮುಷ್ತಾಕ್ ಅವರಿಗೆ ಅತ್ತಿಮಬ್ಬೆ ಪ್ರಶಸ್ತಿ

ಬಾನು ಮುಷ್ತಾಕ್ ಅವರಿಗೆ ಅತ್ತಿಮಬ್ಬೆ ಪ್ರಶಸ್ತಿ
Published on

ಹಾಸನ: ಸಾಹಿತಿ ಬಾನು ಮುಷ್ತಾಕ್ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡುವ 2022-23ನೇ ಸಾಲಿನ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದೇ ತಿಂಗಳ 31ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯೂ 5 ಲಕ್ಷ ರೂ. ನಗದು ಹಾಗೂ ಸ್ಮರಣಿಗೆ, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ಹಾಸನ ನಗರದಲ್ಲಿ 1954 ಏಪ್ರಿಲ್ 3 ರಂದು ಜನಿಸಿದ ಬಾನು ಮುಷ್ತಾಕ್ ಅವರು ಲೇಖಕಿಯಾಗಿ, ಪತ್ರಕರ್ತೆಯಾಗಿ, ನ್ಯಾಯವಾದಿಯಾಗಿ ಕ್ರಿಯಾಶೀಲರಾಗಿದ್ದಾರೆ. ಐದು ಕಥಾ ಸಂಕಲನ ಮತ್ತು ಒಂದು ಪ್ರಬಂಧ ಸಂಕಲನ ಪ್ರಕಟಿಸಿರುವ ಅವರು ಕೌಟುಂಬಿಕ ತಡೆ ಕಾಯ್ದೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಅನೇಕ ಕತೆಗಳು ಹಿಂದಿ, ಇಂಗ್ಲಿಷ್, ಉರ್ದು, ಮಲಯಾಳಂ, ತಮಿಳು ಭಾಷೆಗಳಿಗೆ ಅನುವಾದಗೊಂಡಿವೆ.
ಬಾನು ಮುಷ್ತಾಕ್ ಬರೆದ ‘ಬೆಂಕಿಮಳೆ’ ಕತೆಯನ್ನು ಗಿರೀಶ್ ಕಾಸರವಳ್ಳಿ ಅವರ ನಿರ್ದೇಶನದಲ್ಲಿ ‘ಹಸೀನ’ ಚಲನಚಿತ್ರವಾಗಿದೆ. ಈ ಚಿತ್ರ 3 ರಾಷ್ಟ್ರ ಪ್ರಶಸ್ತಿ ಗಳಿಸಿದೆ. ಹೆಜ್ಜೆ ಮೂಡಿದ ಹಾದಿ, ಬೆಂಕಿಮಳೆ, ಎದೆಯ ಹಣತೆ ಕಥಾಸಂಕಲನ ಹೊರತಂದಿದ್ದು, ಅವರ ಸಾಹಿತ್ಯ ಸೇವೆಗೆ ಹಲವಾರು ಪ್ರಶಸ್ತಿಗಳು ಲಭಿಸಿವೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಬಿ.ಸರೋಜದೇವಿ ಸಾಹಿತ್ಯ ಪ್ರಶಸ್ತಿ, ಇಂಟರ್ ನ್ಯಾಷನಲ್ ವುಮನ್ ಫಾರ್ ರೇಡಿಯೋ ಆ್ಯಂಡ್ ಟೆಲಿವಿಷನ್ ಬಹುಮಾನ, ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ, ಕರ್ನಾಟಕ ಲೇಖಕಿಯರ ಸಂಘದ ಎಚ್.ವಿ. ಸಾವಿತ್ರಮ್ಮ ದತ್ತಿನಿಧಿ ಬಹುಮಾನ ಹಾಗೂ ಗುಡಿಬಂಡೆ ಪೂರ್ಣಿಮಾ ದತ್ತಿನಿಧಿ ಬಹುಮಾನ, ಶ್ರವಣಬೆಳಗೊಳ ಮಹಾಮಸ್ತಕಾಭಿಷೇಕ ಪ್ರಶಸ್ತಿ, ಸುಧಾಮೂರ್ತಿ ಪ್ರಶಸ್ತಿಗಳು ಬಾನು ಮುಷ್ತಾಕ್ ಅವರನ್ನು ಅರಸಿ ಬಂದಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net