ಬಾನು ಮುಷ್ತಾಕ್‌ಗೆ ದಸರಾ ಆಹ್ವಾನಕ್ಕೆ ತೀವ್ರ ವಿರೋಧ

8spt2
Published on

ಸೋಮವಾರಪೇಟೆ: ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ಸಾಹಿತಿ ಬಾನುಮುಷ್ತಾಕ್ ಆಹ್ವಾನ ವಿರೋಧಿಸಿ ಮಂಡಲ ಬಿಜೆಪಿ ವತಿಯಿಂದ ಸೋಮವಾರ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿರುವ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ದಸರಾ ಉದ್ಘಾಟನೆಗೆ ಕನ್ನಡ ವಿರೋಧಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ಮೂಲಕ ಈ ನಾಡಿನ ಅಸಂಖ್ಯಾತ ಹಿಂದುಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ನಾಡದೇವತೆ ಚಾಮುಂಡೇಶ್ವರಿ ದೇವಾಲಯ ಹಿಂದುಗಳದಲ್ಲ ಎನ್ನುವ ಮೂಲಕ ಈ ನಾಡಿಗೆ ಹಾಗೂ ರಾಜಮನೆತನಕ್ಕೆ ಅಗೌರವ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಾನು ಮುಷ್ತಾಕ್ ಈ ನಾಡಿನ ಸಂಪ್ರದಾಯದಂತೆ, ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ದಸರಾ ಉದ್ಘಾಟನೆ ಮಾಡುವುದಾದರೆ ಮಾತ್ರ ಮಾಡಲಿ ಇಲ್ಲವಾದರೆ ನಮ್ಮ ತೀವ್ರ ವಿರೋಧವಿದೆ ಎಂದರು.

ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಭಾರತೀಶ್ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದು ವಿರೋಧಿ ನೀತಿಯನ್ನು ಅನುಸರಿಸುವ ಮೂಲಕ ಒಂದಲ್ಲಾ ಒಂದು ಯಡವಟ್ಟು ಮಾಡುತ್ತಿದೆ ಎಂದರು. ತಮ್ಮ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಒಂದೊಂದು ಗಂಭೀರ ವಿವಾದಗಳನ್ನು ಹೊರತಂದು ಜನರ ದಿಕ್ಕುತಪ್ಪಿಸುವ ಕೆಲಸಮಾಡುತಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ವಿಧಾನಪರಿಷತ್ ಸದಸ್ಯ ಎಸ್.ಜಿ.ಮೇದಪ್ಪ, ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಮನುಕುಮಾರ್ ರೈ, ಎಚ್.ಕೆ. ಮಾದಪ್ಪ, ಮಂಡಲ ಅಧ್ಯಕ್ಷ ಗೌತಮ್, ಕಾರ್ಯದರ್ಶಿ ದರ್ಶನ್, ಪ್ರಮುಖರಾದ ರೂಪ ಸತೀಶ್, ಮಂಜುಳಾ ಸುಬ್ರಮಣಿ, ಇಂದಿರಾ, ಮೋಕ್ಷಿತ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net