ಬಾಬೂಜಿ, ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ

27M.D.R.2
Published on

ಮದ್ದೂರು: ಡಾ.ಬಾಬು ಜಗಜೀವನ ರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಸ್ಥಳೀಯ ಸಂಘ, ಸಂಸ್ಥೆಗಳ ಸಹಕಾರ ಅತ್ಯಗತ್ಯ. ಪ್ರತಿಯೊಬ್ಬರೂ ಭಾಗವಹಿಸುವುದರ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಹಸೀಲ್ದಾರ್ ಡಾ.ಸ್ಮಿತಾ ರಾಮು ಮನವಿ ಮಾಡಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಬುಧವಾರ ಡಾ.ಬಾಬು ಜಗಜೀವನ ರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಯೋಜನೆ ಸಂಬಂಧ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಏ.5ರಂದು ಬಾಬು ಜಗಜೀವನ ರಾಂ ಹಾಗೂ ಏ.14ರಂದು ಅಂಬೇಡ್ಕರ್ ಜಯಂತಿ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಇಲಾಖೆ ಅಧಿಕಾರಿಗಳು ಯಾವುದೇ ಲೋಪದೋಷಗಳು ಉಂಟಾಗದಂತೆ ಮಹನೀಯರ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲು ಶ್ರಮಿಸಬೇಕು ಎಂದರು.

ಶ್ರೀ ಉಗ್ರನರಸಿಂಹಸ್ವಾಮಿ ದೇವಾಲಯದಿಂದ ಮಹನೀಯರ ಭಾವಚಿತ್ರವನ್ನು ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಪೇಟೆ ಬೀದಿ ಮೂಲಕ ತೆರಳಿ ಪುರಸಭೆ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವುದು. ಅಂಬೇಡ್ಕರ್ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದ ಬಳಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಹೇಳಿದರು.

ತಾಪಂ ಇಒ ರಾಮಲಿಂಗಯ್ಯ, ಪುರಸಭೆ ಮುಖ್ಯಾಧಿಕಾರಿ ಮೀನಾಕ್ಷಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜು, ಎಸ್‌ಸಿ, ಎಸ್‌ಟಿ ಜಾಗೃತಿ ಸಮಿತಿ ಸದಸ್ಯ ಚಿದಂಬರಮೂರ್ತಿ, ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಚಂದ್ರನಾಯಕ, ತಾಲೂಕು ಮಟ್ಟದ ಅಧಿಕಾರಿಗಳಾದ ನಾರಾಯಣ್, ರಾಜೇಶ್ವರಿ, ರೇಖಾ, ದೇವರಾಜು, ಮುಖಂಡರಾದ ವೆಂಕಟಾಚಲಯ್ಯ, ಕರಡಕೆರೆ ಯೋಗೇಶ್, ಮಹದೇವು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net