

ಹಾಸನ: ಬಾಲ ಕಾರ್ಮಿಕ ಪದ್ಧತಿಯನ್ನು ತಡೆಗಟ್ಟುವುದು ಎಲ್ಲರ ಜವಾಬ್ದಾರಿಯಾಗಿದ್ದು, ತಂದೆ -ತಾಯಂದಿರು 18 ವರ್ಷ ತುಂಬುವ ಮುನ್ನವೇ ತಮ್ಮ ಮಕ್ಕಳನ್ನು ಕೆಲಸಕ್ಕೆ ಕಳುಹಿಸಬಾರದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಟಿ.ಎನ್ ಇನ್ನವಳ್ಳಿ ಕಿವಿಮಾತು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸಂಯುಕ್ತಾಶ್ರಯದಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ ಪದ್ದತಿ(ನಿಷೇದ ಮತ್ತು ನಿಯಂತ್ರಣ ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರ ಕುರಿತು) ಹಾಸನ ಪ್ರಾದೇಶಿಕ ಅಧಿಕಾರಿಗಳು ಮತ್ತು ನೀರಿಕ್ಷಕರು ಹಾಗೂ ಅರಸೀಕೆರೆ ತಾಲ್ಲೂಕಿನ ಕಲಂ 17ರಡಿ ನೇಮಕಗೊಂಡ ನೀರಿಕ್ಷಕರಿಗೆ ನಗರದ ಅಂಬೇಡ್ಕರ್ ಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟನೆ ಅವರು ಮಾತನಾಡಿದರು.
ಬಾಲ ಕಾರ್ಮಿಕ ಪದ್ಧತಿ ತಡೆಗಟ್ಟಲು ಅಧಿಕಾರಿಗಳು ಎಚ್ಚರ ವಹಿಸಬೇಕು. ಎಲ್ಲಿಯಾದರೂ ಬಾಲ ಕಾರ್ಮಿಕರು ಕಂಡು ಬಂದಲ್ಲಿ ದೂರು ನೀಡುವ ಮೂಲಕ ಸಾರ್ವಜನಿಕರು ಸಹಕರಿಸಬೇಕು. ಬಾಲ ಕಾರ್ಮಿಕತೆಯಿಂದ ಮಕ್ಕಳನ್ನು ಮುಕ್ತಗೊಳಿಸಿ ಉತ್ತಮ ಶಿಕ್ಷಣ ನೀಡುವ ಮೂಲಕ ಭವಿಷ್ಯ ರೂಪಿಸಿಕೊಳ್ಳಲು ನೆರವಾಗಬೇಕು ಎಂದು ಕರೆ ನೀಡಿದರು.
ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರು ಮಾತನಾಡಿ, ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಅನುಷ್ಠಾನ ಮಾಡುವ ಮುನ್ನ ನಾವು ನಮ್ಮ ಮನೆ ಮತ್ತು ನಮ್ಮ ಸಂಸ್ಥೆಗಳಲ್ಲಿ ತಡೆಗಟ್ಟಲು ಸ್ವಯಂ ಅರಿವು ಇರಬೇಕು, ಮಕ್ಕಳಿಗೆ ಶಿಕ್ಷಣ ಬಹು ಮುಖ್ಯವಾಗಿದ್ದು, ತಂದೆ -ತಾಯಿ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಮೊದಲ ಆದ್ಯತೆ ನೀಡಿ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರವಿಕಾಂತ, ಕಾರ್ಮಿಕ ಅಧಿಕಾರಿ ಯಮುನಾ, ಕಾರ್ಮಿಕ ನಿರೀಕ್ಷಕ ಆನಂದ, ರಾಮು ಹಾಗು ಮತ್ತಿತರರು ಭಾಗವಹಿಸಿದ್ದರು.