ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸಿ

rangmandir
Published on

ಬೀದರ್: ಅನಿಷ್ಠ ಪದ್ಧತಿಯಾಗಿರುವ ಬಾಲಕಾರ್ಮಿಕ ಸಂಪೂರ್ಣ ನಿರ್ಮೂಲನೆಗೆ ಪರಿಣಾಮಕಾರಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಸಿದ್ರಾಮಪ್ಪ ಕನಕಟ್ಟೆ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಆಯೋಜಿಸಿದ್ದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಪ್ರಸ್ತುತ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾಕಷ್ಟು ಕಾನೂನು ಜಾರಿಯಲ್ಲಿವೆ. ಇಷ್ಟಾದರೂ ದೇಶಾದ್ಯಂತ 58 ಲಕ್ಷ ಬಾಲ ಕಾರ್ಮಿಕರಿದ್ದಾರೆ. ಇದು ನಮ್ಮ ನ್ಯೂನತೆಗಳನ್ನು ಎತ್ತಿ ತೋರಿಸುತ್ತದೆ. ಆದ್ದರಿಂದ ಎಲ್ಲರ ಸಹಕಾರ ಇದ್ದಲ್ಲಿ ಮಾತ್ರ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯ ಎಂದರು.
ಬಡತನ, ಅನಕ್ಷರತೆ ಹೀಗೆ ಅನೇಕ ಕಾರಣಗಳಿಂದ ಮಕ್ಕಳು ಬಾಲಕಾರ್ಮಿಕ ಪದ್ಧತಿಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಮಕ್ಕಳ ಓದು ಮತ್ತು ಆಟೋಟಕ್ಕೆ ಮುಕ್ತ ವಾತಾವರಣ ಕಲ್ಪಿಸಬೇಕು. ಬಾಲ ಕಾರ್ಮಿಕರು ಕಂಡುಬಂದಲ್ಲಿ ಸಂಬಂಧಿಸಿದ ಇಲಾಖೆ ಅಥವಾ ಚೈಲ್ಡ್ ಹೆಲ್ಪ್ ಲೈನ್ ಸಂಖ್ಯೆ 1098ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಕೋರಿದರು.
ಮಕ್ಕಳು ಶಿಕ್ಷಣ ಪಡೆಯುವುದು ಸಂವಿಧಾನಬದ್ಧ ಹಕ್ಕು. ಒಂದು ವೇಳೆ ಮಕ್ಕಳು ಶಿಕ್ಷಣದಿಂದ ವಂಚಿತರಾದಲ್ಲಿ ಅವರು ನ್ಯಾಯಲಯದ ಮೆಟ್ಟಿಲು ಸಹ ಏರಬಹುದು. ದೇಶದಲ್ಲಿ ಬಾಲಕಾರ್ಮಿಕರನ್ನು ಮುಖ್ಯ ವಾಹಿನಿಗೆ ತರಲು ದೊಡ್ಡ ಅಭಿಯಾನ ನಡೆಯುತ್ತಿದೆ ಎಂದು ತಿಳಿಸಿದರು.
ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ ಕೋಸಂಬೆ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ನಮ್ಮ ಸಂಕಲ್ಪ ಕಾರ್ಯರೂಪಕ್ಕೆ ಬರಬೇಕು. ಪ್ರಸಕ್ತ ಸಾಲಿನಲ್ಲಿ ಶಾಲೆ ಬಿಟ್ಟ ಮಕ್ಕಳ ಸಂಖ್ಯೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಶಾಲೆ ಬಿಟ್ಟ ಮಕ್ಕಳ ಮಾಹಿತಿ ಪಡೆದು ಮುಖ್ಯವಾಹಿನಿಗೆ ತರಬೇಕು ಎಂದು ಹೇಳಿದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಜಿಯಾ ಬಳಬಟ್ಟಿ, ಎನ್ ಜಿಒ ಒಕ್ಕೂಟ ಅಧ್ಯಕ್ಷ ಶಫಿಯೊದ್ದೀನ್, ಹಿರಿಯ ವಕೀಲ ಬಿ.ಎಸ್. ಪಾಟೀಲ್, ಡಾನ್ ಬಾಸ್ಕೊ ಸಂಸ್ಥೆ ನಿದರ್ೇಶಕ ಫಾ.ಜಾಜ್೯, ತಹಸೀಲ್ದಾರ್ ಸಂಗಮೇಶ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಅರ್ಜುನ ಎಸ್., ಕಾರ್ಮಿಕ ನಿರೀಕ್ಷಕಿ ಕೆ. ಸುವರ್ಣಾ ಇತರರಿದ್ದರು.

ಅಧಿಕಾರಿಗಳು ಗೈರು
ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಧಿಕಾರಿಗಳ ಗೈರು ಎದ್ದು ಕಾಣುತ್ತಿತ್ತು. ಅಧ್ಯಕ್ಷತೆ ವಹಿಸಬೇಕಿದ್ದ ಜಿಲ್ಲಾಧಿಕಾರಿ ಗೋವಿಂದರಡ್ಡಿ ಮತ್ತು ಎಸ್ಪಿ ಚನ್ನಬಸವಣ್ಣ ಲಂಗೋಟಿ, ಜಿಪಂ ಸಿಇಒ ಶಿಲ್ಪಾ ಎಂ., ಅಪರ ಡಿಸಿ ಶಿವಕುಮಾರ ಶೀಲವಂತ ಗೈರಾಗಿದ್ದರು. ರಂಗಮಂದಿರದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಜನ ಸಹ ಸೇರಿರಲಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net