ಬಾಲಕಾರ್ಮಿಕರ ನೇಮಕಾತಿ ಕಂಡುಬಂದಲ್ಲಿ ಕಠಿಣ ಕ್ರಮ

4 ckm 5
ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ನಡೆಯಿತು.
Published on
ಚಿಕ್ಕಮಗಳೂರು: ಜಿಲ್ಲೆಯಲ್ಲಿ ೧೮ ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯೋಗ ಅಥವಾ ಪ್ರಕ್ರಿಯೆಗಳಲ್ಲಿ ಹಾಗೂ ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದು ಕಂಡು ಬಂದಲ್ಲಿ ನಿಯಮಾನುಸಾರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸೊಸೈಟಿ ಅಧ್ಯಕ್ಷರಾದ ಸಿ.ಎನ್.ಮೀನಾ ನಾಗರಾಜ್ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕಾರ್ಮಿಕರ ಯೋಜನಾ ಸೊಸೈಟಿ ವತಿಯಿಂದ ಜಿಲ್ಲಾದ್ಯಂತ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅದ್ಯಕ್ಷತೆ ವಹಿಸಿ ಅವರು ಮಾತನಾಡಿದರು. ೨೦೨೪-೨೫ನೇ ಸಾಲಿನ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಬಾಲ ಮತ್ತು ಕಿಶೋರ ಕಾರ್ಮಿಕರು ಕೆಲಸ ಮಾಡುವುದು ಕಂಡು ಬಂದಲ್ಲಿ ನೇಮಕ ಮಾಡಿಕೊಳ್ಳುವವರ ವಿರುದ್ದ ಕ್ರಮ ಕೈಗೊಳ್ಳಬೇಕು. ಅಂಗಡಿ, ಗ್ಯಾರೇಜ್, ಪ್ಲಾಂಟೇಷನ್, ಕೈಗಾರಿಕೆಗಳಲ್ಲಿ, ಹೋಟೆಲ್ ಮತ್ತಿತರ ಪ್ರದೇಶಗಳಲ್ಲಿ ಅನಿರೀಕ್ಷಿತ ದಾಳಿ ಮಾಡಿ ಈ ಬಗ್ಗೆ ಪತ್ತೆಗೆ ಕ್ರಮ ಕೈಗೊಳ್ಳಬೇಕು ಎಂದ ಅವರು, ಪತ್ತೆಯಾದ ಬಾಲ ಕಾರ್ಮಿಕರನ್ನು ಪುನಃ ವಿದ್ಯಾಭ್ಯಾಸಕ್ಕೆ ಒಳಪಡುವ ರೀತಿಯಲ್ಲಿ ಸಂರಕ್ಷಣೆ ಮಾಡಬೇಕು ಎಂದು ಹೇಳಿದರು. ಪ್ರತಿ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕಂಡುಬರುವ ಬಾಲಕಾರ್ಮಿಕರಿಗೆ ಪುನರ್ವಸತಿ ಹಾಗೂ ಸರ್ಕಾರದ ಸೌಲಭ್ಯ ಕಲ್ಪಿಸಿ ಶಾಲೆ ಬಿಟ್ಟ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು. ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಹಾಜರಾತಿ ಪರೀಕ್ಷೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು. ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಅವರಿಗೆ ಸರಿಯಾದ ಮಾರ್ಗದರ್ಶನ ಮಾಡಿ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರೇರಣೆಯಾಗುವಂತೆ ಅರಿವು ಮೂಡಿಸುವ ಹಲವಾರು ಅಗತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು, ಇದನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳು ಮುಂದಾಗಬೇಕು. ಎಸ್.ಇ.ಪಿ. ಮತ್ತು ಟಿ.ಎಸ್.ಪಿ. ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ದೊರೆಯುವಂತೆ ಮಾಡಬೇಕು ಎಂದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹನುಮಂತಪ್ಪ ಅವರು ಮಾತನಾಡಿ, ಜಿಲ್ಲೆಯಲ್ಲಿ ಹಲವು ಮಕ್ಕಳು ಕಾಣೆಯಾಗಿರುವ ಬಗ್ಗೆ ತುರ್ತಾಗಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಶಾಲೆ ಬಿಟ್ಟ ವಿದ್ಯಾರ್ಥಿಗಳು ಹಾಗೂ ವಲಸೆ ಕಾರ್ಮಿಕರನ್ನು ಗುರುತಿಸಿ, ಗುರುತಿನ ಚೀಟಿ ಹಾಗೂ ಸರ್ಕಾರದ ಸೌಲಭ್ಯಗಳನ್ನು ನೀಡಲು ಯೋಜನೆಗಳನ್ನು ರೂಪಿಸಿಕೊಂಡು ಅನುಷ್ಠಾನಗೊಳಿಸಬೇಕು ಎಂದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಬಿ.ಸಿ.ಸುರೇಶ್ ಹಾಗೂ ಸುಭಾಷ್ ಆಲದಕಟ್ಟಿ, ಉಪವಿಭಾಗಾಧಿಕಾರಿ ದೇವರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಯ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net