

ಹಾಸನ: ಬಾಲ್ಯ ವಿವಾಹ ಸಮಾಜಕ್ಕೆ ಒಂದು ರೀತಿಯ ಪಿಡುಗಾಗಿರುವ ಇದು ಕಾನೂನು ಬಾಹಿರ. ಬಾಲ್ಯ ವಿವಾಹಕ್ಕೆ ಅನಕ್ಷರತೆ, ಬಡತನ ಹಾಗೂ ಮೂಢನಂಬಿಕೆಯೇ ಕಾರಣ ಎಂದು ಕೃಷ್ಣ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀನಿವಾಸ್ ಹೇಳಿದರು.
ನಗರದ ಹಾರನಹಳ್ಳಿ ರಾಮಸ್ವಾಮಿ ಪದವಿಪೂರ್ವ ಕಾಲೇಜಿನಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ (ಪೋಕ್ಸೋ) ಕಾಯ್ದೆ ಬಗ್ಗೆ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಅರಿವು ಕಾರ್ಯಕ್ರಮದಲ್ಲಿ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಬಾಲ್ಯ ವಿವಾಹ ಪ್ರಕರಣಗಳಿಂದ ಶಿಶುಮರಣ, ತಾಯಿಯ ಅಕಾಲಿಕ ಸಾವು ಸಂಭವಿಸುವ ಅಪಾಯ ಇರುತ್ತದೆ. ಹಾಗಾಗಿ ಬಾಲ್ಯ ವಿವಾಹ ತಡೆಗೆ ಎಲ್ಲರೂ ಮುಂದಾಗಬೇಕು. ವಿದ್ಯಾರ್ಥಿಗಳಾದ ನೀವು ನಿಮ್ಮ ಅಕ್ಕ-ಪಕ್ಕ ಅಥವಾ ಎಲ್ಲಿಯಾದರೂ ಬಾಲ್ಯ ವಿವಾಹಗಳು ನಡೆಯುವುದು ಕಂಡು ಬಂದರೆ ಕೂಡಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಥವಾ ಪೊಲೀಸರಿಗೆ ಮಾಹಿತಿ ನೀಡುವಂತೆ ಸಲಹೆ ನೀಡಿದರು.
ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಯುವ ಉದ್ದೇಶದಿಂದಲೇ ಪೋಕ್ಸೋ ಕಾಯ್ದೆ ಜಾರಿಗೆ ತರಲಾಗಿದೆ. ಪ್ರಸ್ತುತ ಸಂದರ್ಭದಲ್ಲಿ ಶೇ.38.7ರಷ್ಟು ಬಾಲಕಿಯರು, ಶೇ.8ರಷ್ಟು ಬಾಲಕರು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಇದು ನಿಜಕ್ಕೂ ಕಳವಳಕಾರಿ ಸಂಗತಿ. ಇದರ ತಡೆಗೂ ಪ್ರತಿಯೊಬ್ಬರೂ ಗಮನ ಹರಿಸಬೇಕು. ಎಳೆಯ ಮಕ್ಕಳ ಮೇಲೆ ಯಾವುದೇ ರೀತಿಯ ಅದರಲ್ಲೂ ಲೈಂಗಿಕ ದೌರ್ಜನ್ಯದಂತಹ ಅಮಾನವೀಯ ಕೃತ್ಯ ನಡೆಯಬಾರದು. ಇಂತಹ ಸಮಾಜ ವಿರೋಧಿ, ಕಾನೂನು ವಿರೋಧಿ ಕೃತ್ಯದಲ್ಲಿ ಭಾಗಿಯಾದರೆ 2 ಲಕ್ಷ ರೂ. ದಂಡ ಹಾಗೂ ಜೀವಾವಧಿ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಸತೀಶ್ ಸೇರಿದಂತೆ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.