ಬಾಲ್ಯ ವಿವಾಹ ತಡೆಗೆ ಜಾಗೃತಿ ಮೂಡಿಸಿ

1402Klb01
Published on

ಕಲಬುರಗಿ: ಬಾಲ್ಯ ವಿವಾಹ ಕಾನೂನು ಬಾಹಿರವಾಗಿದ್ದು, ಇದರ ದುಷ್ಪರಿಣಾಮ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಪಿ.ರಾಜಾ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುನಿಸೆಫ್- ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಬಾಲ್ಯ ವಿವಾಹ ನಿಷೇಧ ಹಾಗೂ ಮಹಿಳೆಯರ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕಲಬುರಗಿ ವಿಭಾಗ ಮಟ್ಟದ ಸಾಮರ್ಥ ಅಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸಾಮಾಜಿಕ, ಆರ್ಥಿಕ ಮತ್ತು ಮೂಢನಂಬಿಕೆಗಳಿಂದ ಬಾಲ್ಯವಿವಾಹ ನಡೆಯುತ್ತಿದ್ದು, ಇದನ್ನು ಬೇರು ಮಟ್ಟದಲ್ಲೇ ನಿರ್ಮೂಲನೆಗೊಳಿಸಬೇಕು. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು, ಸ್ವಯಂ ಸೇವಾ ಸಂಸ್ಥೆಗಳು ಅರಿವು ಹಾಗೂ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು. ಬಾಲ್ಯ ವಿವಾಹವು ಹೆಣ್ಣು ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದಲ್ಲದೇ ಆರ್ಥಿಕವಾಗಿ ತೊಂದರೆ ಉಂಟಾಗುತ್ತದೆ. ಬಾಲ್ಯವಿವಾಹ ತಡೆಗಟ್ಟುವಿಕೆ ಪ್ರತಿಯೊಬ್ಬರ ಜವಾಬ್ದಾರಿ. ಇದನ್ನು ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಇಲಾಖೆಗಳ ಸಹಕಾರ ಅಗತ್ಯ ಎಂದರು.
ಯಾದಗಿರಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್ ಮಾತನಾಡಿ, ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜವಾಬ್ದಾರಿ ಮುಖ್ಯವಾಗಿದೆ. ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಯಬಹುದಾಗಿದೆ. ಯಾದಗಿರಿ ಜಿಲ್ಲೆಯಲ್ಲಿ 270 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ 130 ಪ್ರಕರಣಗಳನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದು, ಕೆಲ ಸುಳ್ಳು ಪ್ರಕರಣಗಳ ಬಗ್ಗೆ ಪರಿಶೀಲಿಸಿದ ನಂತರ ಕ್ರಮಗೊಳ್ಳಲಾಗುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ (ಪಿಡಿಎಂ) ಜಂಟಿ ನಿರ್ದೇಶಕಿ ಕೆ.ಎಂ.ರೇವತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (ಮಕ್ಕಳ ಕಲ್ಯಾಣ) ಉಪ ನಿರ್ದೆಶಕಿ ಕೆ. ಹಲೀಮಾ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಸಿಸ್ಟರ್ ರೀನಾ ರಶ್ಮಿ ಡಿಸೋಜಾ, ಸಂಪನ್ಮೂಲ ವ್ಯಕ್ತಿ ಹಾಗೂ ಯುನಿಸೆಫ್ ವಿಭಾಗೀಯ ಸಂಯೋಜಕ ಹರೀಶ್ ಜೋಗಿ, ಎಸಿಡಿಪಿಓ ಇಂದಿರಾ ಇತರರು ಇದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿದರ್ೇಶಕ ಜಿ. ಎಸ್. ಗುಣಾರಿ ಸ್ವಾಗತಿಸಿದರು. ತಿಪ್ಪಣ್ಣ ಶೇಷಮೂರ್ತಿ ವಂದಿಸಿದರು.

ಬಾಲ್ಯ ವಿವಾಹ ಪಿಡುಗನ್ನು ಭಾರತದಿಂದ ನಿರ್ಮೂಲನೆ ಮಾಡಲು ಪ್ರತಿಯೊಬ್ಬ ಪ್ರಜೆ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಅಗತ್ಯ ಸಹಕಾರ ನೀಡಲಿದೆ.
| ಪ್ರಸನ್ನ ದೇಸಾಯಿ ಹೆಚ್ಚುವರಿ ಎಸ್ಪಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net