ಬಾಲ್ಯ ವಿವಾಹ ತಡೆಗೆ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಸೂಚನೆ

ಬಾಲ್ಯ ವಿವಾಹ ತಡೆಗೆ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಸೂಚನೆ
Published on

ಹಾಸನ: ಜಿಲ್ಲೆಯಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪದ್ಧತಿ ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಮಿತಿ, ಮಕ್ಕಳ ಕಲ್ಯಾಣ ಸಮಿತಿ, ಚೈಲ್ಡ್ ಲೈನ್ ಆಡ್ವೈಸರಿ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ಬಾಲ್ಯ ವಿವಾಹ ಕಂಡು ಬಂದಲ್ಲಿ ತಕ್ಷಣ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾತನಾಡಿ, ಶಿಕ್ಷಣ ಇಲಾಖೆಯಲ್ಲಿ 14ರಿಂದ 16ರ ವಯೋಮಾನದ ಹೆಣ್ಣು ಮಕ್ಕಳ ಮಾಹಿತಿ ಇರುತ್ತದೆ. ಶಾಲೆಯಿಂದ ಹೊರ ಉಳಿಯುವ ಮಕ್ಕಳ ಮಾಹಿತಿಯೂ ಕೂಡ ಲಭ್ಯವಿದೆ. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಮೂಲಕವು ಕಿಶೋರಿಯರ ಮಾಹಿತಿ ದೊರೆಯುತ್ತದೆ. ಎಲ್ಲಾ ಸರ್ಕಾರಿ ಇಲಾಖೆಗಳೂ ಸೇರಿ ಮಕ್ಕಳ ರಕ್ಷಣೆಯ ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.

ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಅರಿವು ಮೂಡಿಸಬೇಕು. ಪ್ರಜ್ಞಾವಂತರನ್ನಾಗಿ ಮಾಡಬೇಕು. ಬಾಲ ಕಾರ್ಮಿಕರು ಕಂಡು ಬಂದಲ್ಲಿ ತಕ್ಷಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್. ಪೂರ್ಣಿಮಾ ಮಾತನಾಡಿ, ದೇವಸ್ಥಾನಗಳಲ್ಲಿ ಬಾಲ್ಯ ವಿವಾಹ ನಡೆಯದಂತೆ ನಿಗಾ ವಹಿಸಲು ಆಡಳಿತ ಮಂಡಳಿಯವರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸುರೇಶ್, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಕೋಮಲಾ, ಕಾಮಧೇನು ಶಿಶು ಕೇಂದ್ರ ಮುಖ್ಯಸ್ಥರು, ಚೈಲ್ಡ್ ಲೈನ್ ಹಾಗೂ ತೆರೆದ ತಂಗುದಾಣ ನಿರ್ದೇಶಕರಾದ ಸಿ.ಸಿ. ಪೌಲಸ್ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net