ಬಾಲ್ಯ ವಿವಾಹ ವಿರುದ್ಧ ಹೋರಾಡಬೇಕಿದೆ

7HSN3
Published on

ಹಾಸನ: ಬಾಲ್ಯ ವಿವಾಹ ಹಾಗೂ ಮಕ್ಕಳ ಕಳ್ಳ ಸಾಗಣೆ ಸಮಾಜದ ಪಿಡುಗಾಗಿದ್ದು, ಎಲ್ಲರೂ ಇದರ ವಿರುದ್ಧ ಹೋರಾಡಬೇಕಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಕರೆ ನೀಡಿದರು.

ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಸನ ಯೂನಿಸೆಫ್, ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಮತ್ತು ಮಕ್ಕಳ ರಕ್ಷಣಾ ಘಟಕದಿಂದ ಏರ್ಪಡಿಸಿದ್ದ ಬಾಲ್ಯ ವಿವಾಹ ನಿಷೇಧ ಹಾಗೂ ಮಹಿಳೆ ಮತ್ತು ಮಕ್ಕಳ ಅನೈತಿಕ ಸಾಗಣೆ ತಡೆಗಟ್ಟುವಿಕೆ ವಿಭಾಗೀಯ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಬಡತನ, ಅನಕ್ಷರತೆ, ಅಜ್ಞಾನ ಸೇರಿದಂತೆ ಅನೇಕ ಕಾರಣಗಳಿಂದ ಪೂರ್ವಜರು 12ರಿಂದ 15 ವರ್ಷದ ಒಳಗೆ ಹೆಣ್ಣು ಮಕ್ಕಳಿಗೆ ಮದುವೆ ಮಾಡುತ್ತಿದ್ದರು. ಆದರೆ, ಇದರಿಂದ ಆಕೆಯ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿತ್ತು. ಈಗ ಕಾಲ ಬದಲಾಗಿದ್ದು 18 ವರ್ಷದ ವರೆಗೆ ಮದುವೆ ಮಾಡುವಂತಿಲ್ಲ. ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ಮಹಿಳೆ ತನ್ನ ಜೀವನದ ನಿರ್ಧಾರ ಪ್ರಕಟಿಸಲು ಸ್ವತಂತ್ರಳಾಗಿದ್ದಾಳೆ. ಕಠಿಣ ಕಾನೂನು ಜಾರಿಯಾಗಿದ್ದರೂ ಗ್ರಾಮೀಣ ಪ್ರದೇಶದಲ್ಲಿ ಬಾಲ್ಯ ವಿವಾಹಗಳು ಜರುಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಬಾಲ್ಯ ವಿವಾಹ ತಡೆಗಟ್ಟಲು ಸರ್ಕಾರಿ ಅಧಿಕಾರಿಗಳ ಜತೆಗೆ ಸಾರ್ವಜನಿಕರು ಸಹಕರಿಸಬೇಕು. ತಮ್ಮ ಸುತ್ತಮುತ್ತಲು ಅಪ್ರಾಪ್ತರ ಮದುವೆ ನಡೆಯುತ್ತಿದ್ದರೆ ಕೂಡಲೇ ಮಾಹಿತಿ ನೀಡಬೇಕು. ಮಗುವಿನ ಪಾಲಕರಿಗೆ ಆ ಕುರಿತು ಅರಿವು ಮೂಡಿಸಬೇಕು ಎಂದರು.

ಅಗತ್ಯ ಕ್ರಮಕ್ಕೆ ಸೂಚನೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಪಂ ಅಧಿಕಾರಿಗಳು ಒಟ್ಟಾಗಿ ಬಾಲ್ಯ ವಿವಾಹ ತಡೆಗೆ ಕೈಗೊಳ್ಳಬೇಕಿರುವ ಅಗತ್ಯ ಕ್ರಮದ ವರದಿ ಸಿದ್ಧಪಡಿಸಬೇಕು. ಈ ವಿಚಾರದಲ್ಲಿ ನಿರ್ಲಕ್ಷೃ ತೋರಬಾರದು ಎಂದರು.

ಮಹಿಳೆ ಮತ್ತು ಮಕ್ಕಳ ಕಳ್ಳ ಸಾಗಣೆ ತಡೆಗಟ್ಟಲು ಗಮನ ಕೊಡಬೇಕಿದೆ. ಹಣದಾಸೆಗೆ ಮಕ್ಕಳನ್ನು ಮಾರುವ ಪ್ರಕರಣಗಳು ಹೆಚ್ಚುತ್ತಿವೆ. ಸ್ವಸ್ಥ ಸಮಾಜ ನಿರ್ಮಾಣಕ್ಕೆ ಇಂತಹ ಪ್ರಕರಣಗಳು ಅಡ್ಡಿಯಾಗುತ್ತಿವೆ ಎಂದು ಜಿಲ್ಲಾಧಿಕಾರಿ ಅಭಿಪ್ರಾಯಪಟ್ಟರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕ ಕೆ.ಎ. ದಯಾನಂದ್ ಮಾತನಾಡಿ, ಬಾಲ್ಯ ವಿವಾಹ ಅಪರಾಧವಾಗಿದ್ದು, ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್‌ಗೌಡ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ. ಪರಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕಿ ಕೆ.ಎಂ ರೇವತಿ, ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ವಿಭಾಗೀಯ ಸಂಯೋಜಕ ರಾಘವೇಂದ್ರ ಭಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಾಪಬೋವಿ, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಶಿವಸ್ವಾಮಿ, ಮಲ್ಲೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net