ಬಿಜೆಪಿ ಅಭ್ಯರ್ಥಿ ಬೆಂಬಲಿಸಿ

BJP
Published on

ಚಿತ್ರದುರ್ಗ: ಶಿಕ್ಷಕರ, ಉಪನ್ಯಾಸಕರ ಸಮಸ್ಯೆಗಳನ್ನು ವೈ.ಎ.ನಾರಾಯಣಸ್ವಾಮಿ ಬಹಳ ಹತ್ತಿರದಿಂದ ಕಂಡಿದ್ದಾರೆ. ಅವು ಬಗೆಹರಿಯಲು ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿರುವ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಬೇಕು ಎಂದು ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮನವಿ ಮಾಡಿದರು.

ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಇಲ್ಲಿ ಗುರುವಾರ ಮತಯಾಚಿಸಿ ಮಾತನಾಡಿದ ಅವರು, ಕಳೆದ 18 ವರ್ಷಗಳಿಂದಲೂ ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ. ನಿಮ್ಮ ಅನೇಕ ಬೇಡಿಕೆ ಈಡೇರಿಸುವ ನಿಟ್ಟಿನಲ್ಲೂ ಈ ಹಿಂದೆ ಸದನದಲ್ಲಿ ಗಮನ ಸೆಳೆದಿದ್ದಾರೆ. ಹೀಗಾಗಿ 4ನೇ ಬಾರಿ ಅವಕಾಶ ಮಾಡಿಕೊಡಿ ಎಂದು ವಿನಂತಿಸಿದರು.

ಮಾಜಿ ಎಂಎಲ್ಸಿ ಅರುಣ್ ಶಹಾಪುರ್ ಮಾತನಾಡಿ, ಸೇವಾ ಭದ್ರತೆ ಇಲ್ಲದೆ, ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಗಟ್ಟಿ ನಾಯಕತ್ವ ಬೇಕು. ಬಿಜೆಪಿ ಶಿಕ್ಷಣಕ್ಕೆ ಆದ್ಯತೆ ನೀಡಿದ್ದ ಕಾರಣ ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಲಾಗಿತ್ತು. ನಿಮ್ಮ ಪರವಾಗಿ ಯಾರು ಕೆಲಸ ಮಾಡುತ್ತಾರೋ ಅವರನ್ನು ಬೆಂಬಲಿಸಿ ಎಂದು ಕೋರಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಮುಖಂಡರಾದ ಕಲ್ಲೇಶಯ್ಯ, ದಗ್ಗೆ ಶಿವಪ್ರಕಾಶ್, ನಾಗರಾಜ್ ಬೇದ್ರೆ, ಛಲವಾದಿ ತಿಪ್ಪೇಸ್ವಾಮಿ, ಜಯಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net