

ಪಾಂಡವಪುರ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮುಸ್ಲಿಂ ಸಮುದಾಯವನ್ನು ಓಲೈಸುವ ಭರದಲ್ಲಿ ಬಹುಸಂಖ್ಯಾತ ದಲಿತರನ್ನು ಅಪಮಾನಿಸಿದ್ದು, ಸರ್ಕಾರ ಅವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ತಾಲೂಕು ಬಿಜೆಪಿ ಎಸ್‌ಸಿ ಮೋರ್ಚಾ ಕಾರ್ಯಕರ್ತರು ಗುರುವಾರ ಪಟ್ಟಣದ ತಾಲೂಕು ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಡಾ.ರಾಜ್‌ಕುಮಾರ್ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು 10 ನಿಮಿಷಗಳ ಕಾಲ ಹೆದ್ದಾರಿ ಸಂಚಾರ ತಡೆದ ಪ್ರತಿಭಟನಾಕಾರರು ಬಳಿಕ ಮೆರವಣಿಗೆ ಮೂಲಕ ತೆರಳಿ ತಾಲೂಕು ಕಚೇರಿ ಮುತ್ತಿಗೆ ಹಾಕಿದ ಆಕ್ರೋಶ ವ್ಯಕ್ತಪಡಿಸಿದರು.
ಜೆಡಿಎಸ್ ಪಕ್ಷದ ನಾಯಕರು ಯಾರನ್ನಾದರೂ ಬೇಕಾದರೂ ಮುಖ್ಯಮಂತ್ರಿ ಮಾಡಿಕೊಳ್ಳಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಮತ್ತೊಂದು ಸಮುದಾಯವನ್ನು ಅಪಮಾನಿಸುವ ರೀತಿಯಲ್ಲಿ ಮಾತನಾಡುವುದು ಯಾರಿಗೂ ಶೋಭೆ ತರುವುದಿಲ್ಲ. ಈ ಕೂಡಲೇ ನಾಡಿನ ಬಹುಸಂಖ್ಯಾತರ ಬಳಿ ಬಹಿರಂಗ ಕ್ಷಮೆಯಾಚಿಸಬೇಕು. ಇದರ ನೈತಿಕ ಹೊಣೆ ಹೊತ್ತು ತಮ್ಮ ರಾಜಕೀಯ ನಿವೃತ್ತಿ ಘೋಷಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಮುಖಂಡ ಡಾ.ಎನ್.ಎಸ್.ಇಂದ್ರೇಶ್, ಮೈಶುಗರ್ ಮಾಜಿ ಅಧ್ಯಕ್ಷ ಜೆ.ಶಿವಲಿಂಗೇಗೌಡ, ಕಿಯೋನಿಕ್ಸ್ ನಿರ್ದೇಶಕ ಎಚ್.ಎನ್.ಮಂಜುನಾಥ್, ಪುರಸಭೆ ಸದಸ್ಯ ಶ್ರೀನಿವಾಸ ನಾಯಕ, ಎಸ್‌ಸಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಡಬ ಪುಟ್ಟರಾಜು, ತಾಲೂಕು ಅಧ್ಯಕ್ಷ ಎಸ್.ಮಲ್ಲೇಶ್, ಹೌಸಿಂಗ್ ಬೋರ್ಡ್ ನಿರ್ದೇಶಕ ಎನ್.ಭಾಸ್ಕರ್, ಬಳಘಟ್ಟ ಅಶೋಕ್, ರಾಜೀವ್ ತಮ್ಮಣ್ಣ, ಸೋಮಚಾರಿ ಇತರರು ಇದ್ದರು.