

ಚಿತ್ರದುರ್ಗ: ಮುಂಬರುವ ಲೋಕಸಭಾ ಚುನಾವಣೆಗೆ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಲು ಆಸಕ್ತಿ ಇದ್ದು, ನಾನೂ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಪಕ್ಷದ ಯುವ ಮುಖಂಡ ಎಂ.ಸಿ.ರಘುಚಂದನ್ ತಿಳಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹೊರಗಿನಿಂದ ಬಂದವರಿಗೆ ಹೆಚ್ಚು ಮಣೆ ಹಾಕುವ ಕ್ಷೇತ್ರ ಇದಾಗಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ರಾಷ್ಟ್ರೀಯ ಪಕ್ಷಗಳು ಈ ಭಾಗದ ಸಮಸ್ಯೆಗಳನ್ನು ಅರಿತಿರುವ ಸ್ಥಳೀಯರಿಗೆ ಟಿಕೆಟ್ ನೀಡುವುದು ಉತ್ತಮ ಎಂದು ಅಭಿಪ್ರಾಯಪಟ್ಟರು.
ಕಳೆದ ಚುನಾವಣೆಯಲ್ಲೇ ಟಿಕೆಟ್ ಬಯಸಿದ್ದೆ. ಆದರೆ, ವಯಸ್ಸಿನ ಅಂತರದ ಕಾರಣಕ್ಕೆ ಹಿಂದೆ ಸರಿದೆ. ಈ ಬಾರಿ ನೀಡುವಂತೆ ಬಿಜೆಪಿ ವರಿಷ್ಠರಲ್ಲಿ ಮನವಿ ಮಾಡಿದ್ದೇನೆ. ಕ್ಷೇತ್ರ ಸುತ್ತಾಟದಲ್ಲೂ ತೊಡಗಿದ್ದು, ರಾಜಕೀಯದಲ್ಲಿ ಯುವಕರು ಮುಂದೆ ಬರಬೇಕೆಂಬ ಉದ್ದೇಶದಿಂದ ಹೋದ ಕಡೆ ನನಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ನಾಯಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.
ನಮ್ಮದು ಶಿಸ್ತಿನ ಪಕ್ಷ. ಸಂಸದೀಯ ಮಂಡಳಿಯಲ್ಲಿ ಚರ್ಚಿಸಿಯೇ ಟಿಕೆಟ್ ಅಂತಿಮಗೊಳಿಸಲಾಗುತ್ತದೆ. ಆದರೆ, ಯಾರಿಗೆ ಟಿಕೆಟ್ ದೊರೆತರೂ ಅವರ ಗೆಲುವಿಗಾಗಿ ಶ್ರಮಿಸುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.