ಬಿಜೆಪಿ ನೀಡಿದ್ದ ಭರವಸೆಯನ್ನೇ ಈಡೇರಿಸಿಲ್ಲ: ಡಾ.ಯತೀಂದ್ರ ಸಿದ್ದರಾಮಯ್ಯ ಟೀಕೆ

21
Published on

ಮೈಸೂರು: ವಿಧಾನಸಭಾ ಚುನಾವಣೆಯಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳನ್ನು ಅಧಿಕಾರ ಬಂದ ಕೇವಲ ಒಂದೇ ತಿಂಗಳಿನಲ್ಲಿ ಅನುಷ್ಠಾನಗೊಳಿಸಿ ಕಾಂಗ್ರೆಸ್‌ನದು ನುಡಿದಂತೆ ನಡೆಯುವ ಸರ್ಕಾರ ಎನ್ನಿಸಿಕೊಂಡಿದೆ ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಂಗಳವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ವರುಣ ಕ್ಷೇತ್ರದ ಕಾರ್ಯಕರ್ತರ ಕೃತಜ್ಞತಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಬಿಜೆಪಿಯವರು 2014ರ ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನೇ ಈಡೇರಿಸಿಲ್ಲ. ಕಾಂಗ್ರೆಸ್ ಗ್ಯಾರಂಟಿಗಳನ್ನು ಸಹಿಸಲಾಗದ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಕಳೆದ ಬಾರಿಯದಂತೆ ಈ ಬಾರಿಯೂ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಸಂಪೂರ್ಣವಾಗಿ ಈಡೇರಿಸಿದೆ. ಈ ಮೂಲಕ ಜನರ ವಿಶ್ವಾಸಗಳಿಸಿದೆ ಎಂದರು.
ವರುಣ ಕ್ಷೇತ್ರದಲ್ಲಿ ನನ್ನ ತಂದೆ ಸಿದ್ದರಾಮಯ್ಯ ಅವರು 46 ಸಾವಿರ ಮತಗಳ ಅಂತರದಲ್ಲಿ ಅಭೂತಪೂರ್ವವಾಗಿ ಗೆಲ್ಲಲು ಪಕ್ಷದ ಕಾರ್ಯಕರ್ತರೇ ಕಾರಣ. ಯಾವುದನ್ನೂ ಲೆಕ್ಕಿಸದೆ ಕ್ಷೇತ್ರದ ಮನೆ ಮನೆಗೆ ಭೇಟಿ ನೀಡಿ ಪ್ರಚಾರ ಮಾಡಿದ್ದಾರೆ. ಅದರ ಫಲವೇ ಇಂದು ನನ್ನ ತಂದೆ ಮುಖ್ಯಮಂತ್ರಿ ಆಗಿದ್ದಾರೆ ಎಂದರು.
ಮೈಸೂರಿನ 11 ವಿಧಾನಸಭಾ ಕ್ಷೇತ್ರಗಳ ಪೈಕಿ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಇದಕ್ಕೆ ಕಾರಣ ಪಕ್ಷದ ಕಾರ್ಯಕರ್ತರು. ಹೀಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅನ್ನು ಹೆಚ್ಚಿನ ಬಹುಮತಗಳಲ್ಲಿ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿದರು.
ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ಮಾತನಾಡಿದರು. ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ, ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಮುಡಾ ಮಾಜಿ ಅಧ್ಯಕ್ಷ ಸಿ.ಬಸವೇಗೌಡ, ಜಿಪಂ ಮಾಜಿ ಅಧ್ಯಕ್ಷರಾದ ಕೂರ್ಗಳ್ಳಿ ಮಹದೇವ, ಬಿ.ಎಂ.ರಾಮು, ಕೆ.ಮರಿಗೌಡ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net