ಬಿಜೆಪಿ ಮಾತಿಗೆ ಮರುಳಾಗುವುದಿಲ್ಲ ಮತದಾರರು

ishwar khandre
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆಂದು ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿಯವರು ಏನೂ ಮಾಡದೆ ಮೋಸ ಮಾಡಿದ್ದಾರೆ. ನಾವು ಮಧ್ಯವರ್ತಿ ಇಲ್ಲದೆ ಪಂಚ ಗ್ಯಾರಂಟಿಗಳನ್ನು ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ. ಹೀಗಾಗಿ ಉಪ ಚುನಾವಣೆಯಲ್ಲಿ ಬಿಜೆಪಿಯವರ ಮಾತಿಗೆ ಮತದಾರರು ಮರುಳಾಗುವುದಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಶಿಗ್ಗಾಂವಿ ಕ್ಷೇತ್ರಕ್ಕೆ ಯಾವ ಕೊಡುಗೆಯೂ ನೀಡಿಲ್ಲ. ಒಂದು ಕ್ರೀಡಾಂಗಣ ನಿರ್ವಿುಸಿಕೊಡಿ ಎಂದು ಅಲ್ಲಿಯ ಯುವಕರು ಬೇಡಿಕೆ ಇಟ್ಟಿದ್ದರೂ ಈಡೇರಿಸಲು ಬಿಜೆಪಿಯಿಂದ ಸಾಧ್ಯವಾಗಿಲ್ಲ. ಇವರು ಏನೂ ಅಭಿವೃದ್ಧಿ ಕೆಲಸಗಳನ್ನು ಮಾಡದೆ ಯುವಕರಿಂದ ಮತ್ತು ರೈತರಿಂದ ಮತ ಯಾಚಿಸುತ್ತಿದ್ದಾರೆ ಎಂದು ಟೀಕಿಸಿದರು.

ವಿಧಾನಸಭೆ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಅಲೆ ಇದೆ. ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಶಿಗ್ಗಾಂವಿಯಲ್ಲಿ ಯಾಸಿರಖಾನ್ ಪಠಾಣ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net