

ಮದ್ದೂರು: ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಎಸ್.ಗುರುಚರಣ್ ತಿಳಿಸಿದರು.
ತಾಲೂಕಿನಿಂದ ಚಿತ್ರದುರ್ಗದಲ್ಲಿ ನಡೆಯುತ್ತಿರುವ ಐಕ್ಯತಾ ಸಮಾವೇಶಕ್ಕೆ ಹೋಗುತ್ತಿರುವ ಜನರಿಗೆ ಸುಮಾರು 15ಕ್ಕೂ ಹೆಚ್ಚಿನ ಬಸ್ಸುಗಳ ವ್ಯವಸ್ಥೆಯನ್ನು ಕಲ್ಪಿಸಿ, ಭಾನುವಾರ ಸೋಮನಹಳ್ಳಿಯಲ್ಲಿ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದರು.
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಡಬಲ್ ಇಂಜಿನ್ ಸರ್ಕಾರವಾಗುತ್ತದೆ. ಇದರಿಂದ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡುತ್ತೇವೆಂದು ಪೊಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ನಂತರ ರೈತರಿಗೆ ಮತ್ತು ಜನ ಸಾಮಾನ್ಯರಿಗೆ ಬೆಲೆ ಏರಿಕೆ ಮತ್ತು ಜನ ವಿರೋಧಿ ನೀತಿಗಳನ್ನು ಜಾರಿಗೆ ತರುವ ಮೂಲಕ ಜನರಿಗೆ ಸಂಕಷ್ಟ ಎದುರಾಗುವಂತೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ರಾಜ್ಯದ ಜನರಿಗೆ ಹಲವಾರು ಅನುಕೂಲವಾಗುವ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಂಗ್ರೆಸ್ ವಿಭಾಗದ ಜಿಲ್ಲಾಧ್ಯಕ್ಷ ಸುರೇಶ್‌ಕಂಠಿ, ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸಿ.ನಾಗೇಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮುಖಂಡರಾದ ದೊರೆಸ್ವಾಮಿ, ನಾಗಭೂಷಣ್ ಇದ್ದರು.