ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ

There is no difference in BJP in Belgaum
ಬೆಳಗಾವಿ ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಚುನಾವಣಾಧಿಕಾರಿಗಳಿಗೆ ಸೋಮವಾರ ನಾಮಪತ್ರ ಸಲ್ಲಿಸಿದರು. ಸಂಸದೆ ಮಂಗಲ ಅಂಗಡಿ ಹಾಗೂ ಇತರರು ಇದ್ದರು.
Published on

ಬೆಳಗಾವಿ: ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಿನಿಂದ ನನ್ನ ಗೆಲುವಿಗೆ ಸಂಕಲ್ಪ ಮಾಡಿದ್ದು, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ ಹೇಳಿದರು. ನಗರದ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸೋಮವಾರ ಚುನಾವಣಾಧಿಕಾರಿಗೆ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಕೆಲಸಗಳು, ಜನಪ್ರಿಯ ಯೋಜನೆಗಳ ಹೆಸರಿನಲ್ಲಿ ಮತಯಾಚನೆ ಮಾಡುತ್ತಿದ್ದೇವೆ ಎಂದರು. ಶಾಸಕ ಅನೀಲ ಬೆನಕೆ ಮುಂದಾಳತ್ವದಲ್ಲಿಯೇ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದೇವೆ. ಅಲ್ಲದೆ, ಕನ್ನಡ, ಮರಾಠಿ ಭಾಷಿಕರು ಒಗ್ಗಟ್ಟಿನಿಂದ ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸಲಿದ್ದಾರೆ. ಪಕ್ಷ ಸಂಘಟನೆಗಾಗಿ ದಶಕಗಳಿಂದ ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ಕ್ಷೇತ್ರದಲ್ಲಿನ ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುತ್ತೇವೆ ಎಂದರು. ಉತ್ತರ ವಿಧಾನಸಭಾ ಕ್ಷೇತ್ರದಲ್ಲಿನ ಎಲ್ಲ ಮತದಾರರಿಗೆ ಸರ್ಕಾರಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಕುಡಿಯುವ ನೀರು, ರಸ್ತೆ, ಚರಂಡಿ, ಆರೋಗ್ಯ, ಶಿಕ್ಷಣ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಅಲ್ಲದೆ, ಮಳೆ ನೀರು ಸಂಗ್ರಹಿಸಿ ಮರುಬಳಕೆ ಮಾಡುವ ವಿಶೇಷ ಯೋಜನೆಯ ಅನುಷ್ಠಾನ ಸಂಕಲ್ಪವೂ ಮಾಡಲಾಗಿದೆ ಎಂದರು. ಸಂಸದೆ ಮಂಗಲ ಅಂಗಡಿ, ಬಸವರಾಜ ರೊಟ್ಟಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net