ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರಲ್ಲ: ಸಿದ್ದರಾಮಯ್ಯ ಕಿಡಿ

SiddaramaiahPCOX_vb_03
Published on

ಮೈಸೂರು: ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರಲ್ಲ. ಆದರೆ, ನಾವು ಚರ್ಚೆಗೆ ಸದಾ ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾನುವಾರ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೈಸೂರಿನಲ್ಲಿ ಶನಿವಾರ ನಡೆದ ಸಮಾವೇಶದಲ್ಲಿ ಮುಖ್ಯಮಂತ್ರಿ ಅವರು ಡಿಸಿಎಂಗೆ ಅವಮಾನ ಮಾಡಿದ್ದಾರೆ ಎಂಬ ಬಿಜೆಪಿಯವರ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಕಾರ್ಯಕ್ರಮದಲ್ಲಿ ಇರುವವರಿಗೆ ಸ್ವಾಗತ ಮಾಡುವುದು ಪರಿಪಾಠ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಆ ವೇಳೆಯಲ್ಲಿ ಇರದಿದ್ದ ಕಾರಣ, ಅವರ ಹೆಸರನ್ನು ತೆಗೆದುಕೊಳ್ಳಲಿಲ್ಲ.

ಹೀಗಾಗಿ, ಇದರಲ್ಲಿ ಅವಮಾನ ಮಾಡುವ ಪ್ರಶ್ನೆ ಇಲ್ಲ. ಬಿಜೆಪಿಯವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ನನ್ನ ಹಾಗೂ ಡಿಸಿಎಂ ನಡುವೆ ಒಡಕುಂಟು ಮಾಡುವ ಉದ್ದೇಶದಿಂದ ಬಿಜೆಪಿಯವರು ಇಂತಹ ಹೇಳಿಕೆ ನೀಡುತ್ತಾರೆ. ಇದರಿಂದ ರಾಜಕೀಯ ಲಾಭವಾಗಬಹುದೆಂಬ ಭ್ರಮೆ ಬಿಜೆಪಿಯವರಿಗಿದ್ದು, ಇದು ಸದಾ ಭ್ರಮೆಯಾಗಿಯೇ ಇರಲಿದೆ ಎಂದು ಕುಟುಕಿದರು.

ಸಾಧನಾ ಸಮಾವೇಶ ಬಿಜೆಪಿಯವರಿಗೆ ಉತ್ತರ ನೀಡಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಸರ್ಕಾರಕ್ಕೆ ಎರಡು ವರ್ಷ ತುಂಬಿದ ಸಂದರ್ಭದಲ್ಲಿ ವಿಜಯನಗರದಲ್ಲಿ ನಡೆದ ಸಮಾವೇಶದಲ್ಲಿ ಸುಮಾರು 2 ಲಕ್ಷ ಜನ ಭಾಗವಹಿಸಿದ್ದರು.

ಇದು ಸರ್ಕಾರಕ್ಕೆ ಜನರ ಬೆಂಬಲವನ್ನು ಸೂಚಿಸುತ್ತದೆ. ಬಿಜೆಪಿಯವರು ಕೇವಲ ಸುಳ್ಳು ಹೇಳುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ಅನುಕರಿಸುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿಗಳಿಗಾಗಿ 52 ಸಾವಿರ ಕೋಟಿ ರೂ. ಖರ್ಚು ಮಾಡಿದೆ ಎಂದರು.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧ. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ಸಮಾನಾಂತರ ಜಲಾಶಯ ನಿರ್ಮಿಸಲಾಗುವುದು. ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ, ಕೇಂದ್ರ ಸರ್ಕಾರ ಅನುಮೋದನೆ ಕೊಡುತ್ತಿಲ್ಲ. ಗೋವಾ ಹಾಗೂ ಕೇಂದ್ರದಲ್ಲಿ ಬಿಜೆಪಿಯವರದ್ದೇ ಸರ್ಕಾರವಿದೆ. ಮಹಾದಾಯಿ ಮತ್ತು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ ಎಂದು ಬಿಜೆಪಿಗೆ ಸವಾಲು ಹಾಕಿದರು.

ದೇವನಹಳ್ಳಿ ಬಳಿ ಕೈಗಾರಿಕೆಗಳಿಗೆ ಜಮೀನು ಕೊಡಲ್ಲ ಎಂದು ಹೇಳಿಲ್ಲ. ಜಮೀನು ಕೊಡುತ್ತೇವೆ. ಹೀಗಾಗಿ, ಯಾವುದೇ ಕೈಗಾರಿಕೆಗಳು ರಾಜ್ಯದಿಂದ ನಿರ್ಗಮಿಸುತ್ತಿಲ್ಲ. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಎಷ್ಟೇ ರಾಜಕೀಯ ಮಾಡಿದರೂ, ಯಾವ ಕೈಗಾರಿಕೆ ಅಲ್ಲಿಗೆ ಹೋಗಲ್ಲ ಎಂದು ಪ್ರಶ್ನೆವೊಂದಕ್ಕೆ ಉತ್ತರಿಸಿದರು.

ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ಡಿಜಿಟಲ್ ಪೇಮೆಂಟ್‌ನಿಂದ ಜಿಎಸ್‌ಟಿ ತೆರಿಗೆ ನೋಟಿಸ್ ನೀಡುತ್ತಿದೆ ಎಂಬುದರ ಕುರಿತು ಪ್ರತಿಕ್ರಿಯೆ ನೀಡಿ, ಜಿಎಸ್‌ಟಿ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಮಾಡಿದ್ದು, ಜಿಎಸ್‌ಟಿ ಕೌನ್ಸಿಲ್ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತದೆ.

ಇದಕ್ಕೆ ರಾಜ್ಯ ಸರ್ಕಾರಗಳು ಜವಾಬ್ದಾರಿಯಲ್ಲ. ಆದಾಗ್ಯೂ ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ, ರಾಜ್ಯಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net