ಬಿಜೆಪಿಯವರು ಗೋಡ್ಸೆ ಗಾಂಧಿಗಳು

dkshivakumar
Published on

ಹುಬ್ಬಳ್ಳಿ: ನಾವೇ ಮೂಲ (ಒರಿಜಿನಲ್) ಗಾಂಧಿಗಳು. ಬಿಜೆಪಿಯವರು ಗೋಡ್ಸೆ ಗಾಂಧಿಗಳು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಹಣದಲ್ಲಿ ನಕಲಿ ಗಾಂಧಿಗಳು ಬೆಳಗಾವಿಯಲ್ಲಿ ಸಮಾವೇಶ ಮಾಡುತ್ತಿದ್ದಾರೆ ಎಂಬ ಬಿಜೆಪಿ ಟೀಕೆಗೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು.

ಬೆಳಗಾವಿಯಲ್ಲಿ ಜ. 21ರಂದು ಆಯೋಜಿಸಿರುವ ಗಾಂಧಿ ಭಾರತ ಸಮಾವೇಶ ಎಐಸಿಸಿ ಕಾರ್ಯಕ್ರಮ, ಕೆಪಿಸಿಸಿ ಜವಾಬ್ದಾರಿ ವಹಿಸಿಕೊಂಡಿದೆ. ಉತ್ತರ ಕನ್ನಡ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಯಿಂದ 75 ಸಾವಿರ ಜನರು ಭಾಗವಹಿಸಲಿದ್ದಾರೆ. ಕಿತ್ತೂರ ಕರ್ನಾಟಕ ಭಾಗದ ಸಮಾವೇಶವಿದು. ಬೇರೆ ಕಡೆಯವರು ಸಾಂಕೇತಿಕವಾಗಿ ಪಾಲ್ಗೊಳ್ಳುವರು ಎಂದರು.

ಅಂದು ಬೆಳಗಾವಿ ಸುವರ್ಣ ಸೌಧದಲ್ಲಿ ಸರ್ಕಾರಿ ಕಾರ್ಯಕ್ರಮ ನಡೆಯಲಿದೆ. ಅಲ್ಲಿ ಬೆಳಗ್ಗೆ 10.30 ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗಾಂಧಿ ಪುತ್ಥಳಿ ಅನಾವರಣಗೊಳಿಸುವರು. ಲೋಕಸಭೆ ವಿಪಕ್ಷ ನಾಯಕ ರಾಹುಲ ಗಾಂಧಿ ಉಪಸ್ಥಿತರಿರುವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸುವರು. ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಪತಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಕಾರ್ಯಕ್ರಮ ನಡೆಸುತ್ತಿದ್ದೇವೆ. ಈ ಜವಾಬ್ದಾರಿಯನ್ನು ಸಚಿವ ಎಚ್.ಕೆ. ಪಾಟೀಲ ಅವರಿಗೆ ವಹಿಸಲಾಗಿದೆ ಎಂದು ತಿಳಿಸಿದರು.

ಇದಾದ ಮೇಲೆ ಗಾಂಧಿ ಬಾವಿಯಲ್ಲಿ ಪಕ್ಷದ ಕಾರ್ಯಕ್ರಮ ನಡೆಯಲಿದೆ. ಎಲ್ಲ ಸಾರ್ವಜನಿಕರು ಭಾಗವಹಿಸಬಹುದು. ಗಾಂಧಿ- ಅಂಬೇಡ್ಕರ್ ಸ್ಮರಣೆ ಹಾಗೂ ಸಂವಿಧಾನ ರಕ್ಷಣೆಯ ಸಂದೇಶವನ್ನು ಈ ಕಾರ್ಯಕ್ರಮದ ಮೂಲಕ ನೀಡುತ್ತಿದ್ದೇವೆ. ಎಲ್ಲ ನಾಯಕರು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ವಿವರಿಸಿದರು.

ಫೆ. 2ನೇ ವಾರದಲ್ಲಿ ರಾಜ್ಯದಲ್ಲಿ 100 ಕಾಂಗ್ರೆಸ್ ಕಚೇರಿಗಳ ಸ್ಥಾಪನೆಗೆ ಶಂಕುಸ್ಥಾಪನೆ ಮಾಡಲಾಗುವುದು. ಅದಕ್ಕೆ ದಾಖಲೆಗಳ ಪರಿಶೀಲನೆ ಮಾಡಿದ್ದೇವೆ. ಎಲ್ಲ ಕಡೆ ಕಾರ್ಯಕ್ರಮ ನಡೆಯಲಿದೆ, ತಯಾರಿ ಮಾಡಿಕೊಂಡಿದ್ದೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net