

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:
ಬೆಲೆ ಏರಿಕೆ ವಿರೋಧಿಸಿ ಜನಾಕ್ರೋಶ ಯಾತ್ರೆ ನಡೆಸಲು ಬಿಜೆಪಿಗೆ ನೈತಿಕ ಹಕ್ಕಿಲ್ಲ. ಕೇಂದ್ರದಲ್ಲಿ ಕಳೆದ 11 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ರಾಜ್ಯದ ಜನತೆಯ ಮೇಲೆ ಸಾಕಷ್ಟು ಅನ್ಯಾಯ, ತಾರತಮ್ಯ ಮಾಡಿದ್ದು, ಅವರು ಪಶ್ಚಾತ್ತಾಪ ಯಾತ್ರೆ ನಡೆಸುವುದು ಸೂಕ್ತ ಎಂದು ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಟೀಕಿಸಿದರು.
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಿದ್ದರೂ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿದ್ದು ಕೇಂದ್ರದ ಬಿಜೆಪಿ ಸರ್ಕಾರ. ಈಗ ನಮ್ಮ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರದ ಮೇಲೆ ಜನರ ಆಕ್ರೋಶವಿದೆ ಎಂದು ಹೇಳಿದರು.
ಕೃಷ್ಣ ಮೇಲ್ದಂಡೆ ಸೇರಿ ಇನ್ನಿತರ ನೀರಾವರಿ ಯೋಜನೆಗಳಿಗೆ ಆರ್ಥಿಕ ನೆರವು, ನಗರದ ಸ್ಥಳೀಯ ಸಂಸ್ಥೆಗಳಿಗೆ ವಿಶೇಷ ಅನುದಾನ ಸೇರಿ ಹಲವು ಬೇಡಿಕೆಗಳ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ್ದರು. ಇದರಲ್ಲಿ ಒಂದೇ ಒಂದು ಬೇಡಿಕೆಯನ್ನು ಈಡೇರಿಸಿಲ್ಲ. ಮಹದಾಯಿ, ಮೇಕೆದಾಟು ಯೋಜನೆಗೆ ಪರವಾನಿಗೆ ನೀಡಿಲ್ಲ. ಕೇಂದ್ರ ಸಾಕಷ್ಟು ಅನ್ಯಾಯ ಮಾಡಿದರೂ ರಾಜ್ಯದ ಐವರು ಕೇಂದ್ರ ಸಚಿವರು, ಬಿಜೆಪಿಯ 18 ಸಂಸದರು ನಮ್ಮ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಿರುವುದು ಹಾಸ್ಯಾಸ್ಪದ ಎಂದು ಆರೋಪಿಸಿದರು.
ಕಾಂಗ್ರೆಸ್ ಬೇಕಪ್ಪಾ ಬೇಕು ಎಂದು ಎಚ್.ಡಿ. ದೇವೇಗೌಡರು ಪ್ರಧಾನಿ ಹಾಗೂ ಅವರ ಮಗ ಎಚ್.ಡಿ. ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಈಗ ದಾರಿ ತಪ್ಪಿರುವ ಮಕ್ಕಳು (ನಿಖಿಲ್ ಕುಮಾರಸ್ವಾಮಿ, ಬಿ.ವೈ. ವಿಜಯೇಂದ್ರ) ಸಾಕಪ್ಪಾ ಸಾಕು ಕಾಂಗ್ರೆಸ್ ಎಂದು ಹೋರಾಟ ಮಾಡುತ್ತಿರುವುದು ದುರ್ದೈವ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಣ್ಣ ಪುಟ್ಟ ವಿಚಾರಗಳಿಗೆ ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ಟೀಕಿಸುವುದು ಸರಿಯಲ್ಲ. ಅವರಿಗೆ ಧೈರ್ಯವಿದ್ದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿಬಿಡಿ ಎಂದು ಹೇಳಲಿ. ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ. ಹೊಂದಿಸಲು ನಾವು ಅಲ್ಪ ಪ್ರಮಾಣದಲ್ಲಿ ತೆರಿಗೆ ವಿಧಿಸಿದ್ದೇವೆ. ಆದರೆ, ಕೇಂದ್ರ ಸರ್ಕಾರ ಕಳೆದ 11 ವರ್ಷಗಳಿಂದ ಜನರನ್ನು ಸುಲಿಗೆ ಮಾಡಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರಡ್ಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸದಾನಂದ ಡಂಗನವರ, ಡಾ. ಶರಣಪ್ಪ ಕೊಟಗಿ, ಅನಿಲಕುಮಾರ ಪಾಟೀಲ, ಇತರರು ಇದ್ದರು.