

ಬೀದರ್: ಮೈಸೂರಿಗೆ ಕೊಟ್ಟಂತೆ ಬೀದರ್ ಜಿಲ್ಲೆಗೂ ಫಿಲ್ಮ್ ಸಿಟಿ ಮಂಜೂರಿ ಮಾಡಲು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ ಆಗ್ರಹಿಸಿದ್ದಾರೆ.
ಅಧಿವೇಶನದಲ್ಲಿ ಶುಕ್ರವಾರ ಈ ವಿಷಯ ಪ್ರಸ್ತಾಪಿಸಿ, ಬೀದರ್ ದಕ್ಷಿಣ ಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಸಾಕಷ್ಟು ಐತಿಹಾಸಿಕ, ಪ್ರವಾಸಿ ಸ್ಥಳಗಳಿವೆ. ತೆಲಂಗಾಣದ ಹೈದರಾಬಾದ್ ಜಿಲ್ಲೆಗೆ ಅತಿ ಸಮೀಪವಿದೆ. ಜಿಲ್ಲೆ ಐತಿಹಾಸಿಕ ಸ್ಥಳಗಳು ಅಭಿವೃದ್ಧಿಗೊಳಿಸುವ ಮೂಲಕ ಪ್ರವಾಸಿಗರನ್ನು ಸೆಳೆಯುವ ಕೆಲಸ ಆದ್ಯತೆ ಮೇಲೆ ಮಾಡಬೇಕು. ಈ ನಿಟ್ಟಿನಲ್ಲಿ ಫಿಲ್ಮ್ ಸಿಟಿ ಮಾಡಿದರೆ ಉತ್ತಮ ಎಂದು ಸದನದ ಗಮನ ಸೆಳೆದರು.
ರಾಜ್ಯದ ಅನೇಕ ಪ್ರವಾಸಿ ತಾಣಗಳು ಅಳಿವಿನ ಅಂಚಿನಲ್ಲಿವೆ. ಅವುಗಳನ್ನು ಅಭಿವೃದ್ಧಿಪಡಿಸುವ ಕೆಲಸ ಸರ್ಕಾರ ಮಾಡಬೇಕು. ಕರ್ನಾಟಕದ ಕಿರೀಟವಾದ ಬೀದರ್ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಯೋಜನೆ ರೂಪಿಸಬೇಕು. ಚಾಂಗಲೇರಾದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆಯಿಂದ 3 ಕೋಟಿ ರೂ. ಅನುದಾನ ನೀಡಬೇಕೆಂದು ಮನವಿ ಮಾಡಿದರು.
ಏಪ್ರಿಲ್ ತಿಂಗಳಿನಲ್ಲಿ ಪ್ರವಾಸೋದ್ಯಮ, ಪುರಾತತ್ವ ಸೇರಿದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿನ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದಾಗಿ ಸಚಿವ ಸಿ.ಪಿ ಯೋಗೇಶ್ವರ ಭರವಸೆ ನೀಡಿದರು.