ಬೂತ್ ಮಟ್ಟದಿಂದ ಪಕ್ಷ ಸಂಘಟಿಸಿ

29ark1
Published on

ಅರಕಲಗೂಡು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬದಲಾವಣೆ ತರುವ ಉದ್ದೇಶದಿಂದ ಕಾರ್ಯಕರ್ತರು ಬೂತ್ ಮಟ್ಟದಿಂದ ಪಕ್ಷ ಸಂಘಟಿಸಲು ಸಹಕರಿಸಬೇಕು ಎಂದು ಕಾಂಗ್ರೆಸ್ ಮುಖಂಡ ಎಂ.ಟಿ.ಕೃಷ್ಣೇಗೌಡ ಮನವಿ ಮಾಡಿದರು.


ಪಟ್ಟಣದ ಜನಸಂಪರ್ಕ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಕಸಬಾ ಹೋಬಳಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕ್ಷೇತ್ರದಲ್ಲಿನ ಸಮಸ್ಯೆಗಳನ್ನು ಅರಿಯುವ ಸಲುವಾಗಿ ಸಾಕಷ್ಟು ಭಾಗದಲ್ಲಿ ಪ್ರವಾಸ ಕೈಗೊಂಡಿದ್ದು, ಹಲವಾರು ವರ್ಷಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿರುವುದು ಎದ್ದು ಕಾಣಿಸುತ್ತಿದೆ. ಅನೇಕ ಹಳ್ಳಿಗಳಲ್ಲಿ ಕನಿಷ್ಠ ಸಂಪರ್ಕ ರಸ್ತೆಗಳು ಕೂಡ ಸುಧಾರಣೆ ಕಂಡಿಲ್ಲ. ಮೂಲ ಸೌಕರ್ಯಗಳಿಗಾಗಿ ಜನತೆ ಪರದಾಡುವ ಸ್ಥಿತಿ ಇದೆ. ನೀರಾವರಿ ಸೌಲಭ್ಯ ಇಲ್ಲ. ರೈತರು ಬೆಳೆದ ಬೆಳೆಗಳಿಗೆ ಉತ್ತಮ ಮಾರುಕಟ್ಟೆ ಸೌಲಭ್ಯವಿಲ್ಲ. ಕ್ಷೇತ್ರದಲ್ಲಿ ಇಷ್ಟೆಲ್ಲ ವಾಸ್ತವ ಸಮಸ್ಯೆಗಳಿದ್ದರೂ ಪ್ರತಿ ಚುನಾವಣೆಯಲ್ಲಿ ಅಭಿವೃದ್ಧಿ ಪರ ರಾಜಕಾರಣ ಮುನ್ನಲೆಗೆ ಬರುತ್ತಿಲ್ಲ. ಈ ಬಾರಿ ಮತದಾರರು ಹೊಸ ಮುಖಗಳಿಗೆ ಅವಕಾಶ ನೀಡಬೇಕು ಎಂದು ಹೇಳಿದರು.


ಕ್ಷೇತ್ರದಲ್ಲಿ ಬೂತ್ ಮಟ್ಟದಿಂದ ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದೆ. ಕಾರ್ಯಕರ್ತರು ಮತ್ತು ಮುಖಂಡರು ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡದೆ ಪಕ್ಷ ಸಂಘಟನೆ ಇನ್ನಷ್ಟು ಬಲಪಡಿಸಲು ಸಹಕಾರ ನೀಡಬೇಕು. ಜ.13 ರಂದು ತಾಲೂಕಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡುತ್ತಿದ್ದು, ಬಿಳಗೂಲಿ ಗ್ರಾಮದಲ್ಲಿ ನಡೆಯುವ ಸಂತಶ್ರೇಷ್ಠ ಕನಕದಾಸರು ಮತ್ತು ಸ್ವಾತಂತ್ರ್ಯ ಸೇನಾನಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.


ಯುವ ಮುಖಂಡ ಶಿರೀನ್ ರಂಗಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net