

ಕೆ.ಆರ್.ಸಾಗರ: ಕೃಷ್ಣರಾಜಸಾಗರದ ಬೃಂದಾವನ ಗಾರ್ಡನ್‌ನಲ್ಲಿ ಬುಧವಾರ ಆಯೋಜಿಸಿದ್ದ 9ನೇ ವಿಶ್ವ ಯೋಗ ದಿನಾಚರಣೆಗೆ ಹಲವಾರು ಗಣ್ಯರು, ನೂರಾರು ಯೋಗಾಸಕ್ತರು ಸಾಕ್ಷಿಯಾದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಪತಂಜಲಿ ಯೋಗ ಶಿಕ್ಷಣ ಸಮಿತಿ, ಆಯುರ್ ಮಟಂ ಆಯುರ್ವೇದ ಹೆಲ್ತ್ ವಿಲೇಜ್ ಸಹಯೋಗದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ 7.05ಕ್ಕೆ ಚಂದ್ರವನ ಆಶ್ರಮದ ಪೀಠಾಧಿಪತಿ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಚಾಲನೆ ನೀಡಿದರು.
ಯೋಗವು ಪ್ರಕೃತಿ ಮತ್ತು ಮನುಷ್ಯನ ನಡುವೆ ಸಾಮರಸ್ಯವನ್ನುಂಟು ಮಾಡುವುದರ ಜತೆಗೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಲು ಸಹಾಯ ಮಾಡುತ್ತದೆ. ದೇಹ ಮಾತ್ರವಲ್ಲದೆ ಮನಸ್ಸನ್ನು ಶುದ್ಧೀಕರಿಸಲು ನೆರವಾಗುತ್ತದೆ ಎಂದು ಅವರು ಹೇಳಿದರು.
ಶಾಸಕ ರಮೇಶ ಬಾಬು ಬಂಡಿಸಿದ್ದೇಗೌಡ ಮಾತನಾಡಿ, ಉತ್ತಮ ಆರೋಗ್ಯಕ್ಕಾಗಿ ಯೋಗ ಪ್ರತಿದಿನ ನಮ್ಮ ಜೀವನದ ಒಂದು ಭಾಗವಾಗಬೇಕು. ಯೋಗ ಮಾಡುವುದರಿಂದ ಬೇರೆ ಎಲ್ಲ ಕಾರ್ಯಚಟುವಟಿಕೆಗಳು ಯಶಸ್ವಿಯಾಗಿ ನಡೆಯುತ್ತವೆ. ಇದನ್ನು ಹಲವಾರು ಮಹಾನ್ ವ್ಯಕ್ತಿಗಳು ಅನುಸರಿಸಿ ಮಾರ್ಗದರ್ಶನ ನೀಡಿದ್ದಾರೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಯೋಗಕ್ಕೆ ದೇಹ, ಮನಸ್ಸು ಮತ್ತು ಆತ್ಮವನ್ನು ಒಂದುಗೂಡಿಸುವ ಶಕ್ತಿ ಇದೆ. ಭಾರತ ಯೋಗ ವಿದ್ಯೆಯಲ್ಲಿ ವಿಶ್ವ ಗುರುವಾಗಿದೆ. ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸುಸ್ಥಿರ ಹಾಗೂ ಸದೃಢವಾಗಿ ಇಟ್ಟಿಕೊಳ್ಳಲು ಯೋಗ ಸಹಕಾರಿಯಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಮಾತನಾಡಿ, ಪೊಲೀಸ್ ಇಲಾಖೆ ಸಿಬ್ಬಂದಿ ಪ್ರತಿದಿನ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಾರೆ. ಇಲಾಖೆ ಸಿಬ್ಬಂದಿ ಅಭ್ಯಾಸ ಮಾಡಿದರೆ ಸಾರ್ವಜನಿಕರಿಗೆ ಇನ್ನೂ ಉತ್ತಮ ಸೇವೆ ಒದಗಿಸಬಹುದು ಎಂದು ಹೇಳಿದರು.
ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಕಾರ್ಯದಿಶಿ ಪಿ.ಸಿ. ಜಾಫರ್, ಜಿಲ್ಲಾಧಿಕಾರಿ ಡಾ.ಕುಮಾರ, ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಜಿಪಂ ಮುಖ್ಯ ಕಾರ್ಯದರ್ಶಿ ಶೇಕ್ ತನ್ವೀರ್ ಆಸಿಫ್, ಪಾಂಡವಪುರ ಉಪವಿಭಾಗಾಧಿಕಾರಿ ನಂದೀಶ್, ತಹಸೀಲ್ದಾರ್ ಸೌಮ್ಯಾ, ಆಯುಷ್ ಜಿಲ್ಲಾ ಅಧಿಕಾರಿ ಡಾ.ಸೀತಾಲಕ್ಷ್ಮಿ, ಕೆ.ಆರ್.ಸಾಗರ ಗ್ರಾಪಂ ಅಧ್ಯಕ್ಷ ಕೆ.ನರಸಿಂಹ, ಶ್ರೀರಂಗಪಟ್ಟಣ ತಹಸೀಲ್ದಾರ್ ಅಶ್ವಿನಿ, ತಾಪಂ ಕಾಯನಿರ್ವಹಾಣಾಧಿಕಾರಿ ಎಂ.ಎಸ್.ವೀಣಾ ಭಾಗವಹಿಸಿದ್ದರು.