ಬೆಂಗಳೂರಿನಲ್ಲಿ ಹಕ್ಕೊತ್ತಾಯ ಸಮಾವೇಶ 23ಕ್ಕೆ

Ahinda
Published on

ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಅ. 18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿಗೆ ಒಪ್ಪಿಗೆ ಸೂಚಿಸಿ, ಜಾರಿಗೆ ಮುಂದಾಗಬೇಕು ಎಂದು ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಒತ್ತಾಯಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಜಾರಿಗೊಳಿಸಲು ಆಗ್ರಹಿಸಿ 23ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಕ್ಕೊತ್ತಾಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

ರಾಜ್ಯದೆಲ್ಲ ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿಗಳ ಅಧ್ಯಯನ ನಡೆಸಿ ತಯಾರಿಸಲಾದ ಕಾಂತರಾಜ್ ಆಯೋಗದ ಸಮೀಕ್ಷಾ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರ ಮೀನಾಮೇಷ ಎಣಿಸದೆ, ಸೂಕ್ತ ತೀರ್ಮಾನ ಕೈಗೊಂಡು ಜಾರಿಗೊಳಿಸಬೇಕು ಎಂದು ಮನವಿ ಮಾಡಿದರು.

ಒಕ್ಕೂಟದ ರಾಜ್ಯ ಸಂಚಾಲಕ ಬಿ.ಟಿ.ಜಗದೀಶ್ ಮಾತನಾಡಿ, ರಾಜ್ಯದಲ್ಲಿ ಹೆಚ್ಚು ಜನಸಂಖ್ಯೆ ಹೊಂದಿರುವ ಅಹಿಂದ ಸಮುದಾಯಗಳಿಗೆ ಅದರ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ, ಉದ್ಯೋಗಾವಕಾಶ, ಶಿಕ್ಷಣ ಲಭಿಸಿಲ್ಲ. ಇದಕ್ಕೆ ಅರಿವು, ಸಂಘಟನಾ ಕೊರತೆಯೇ ಕಾರಣ. ಜಾತಿ ಜನಗಣತಿ ವರದಿ ಜಾರಿಯಿಂದ ಆಯಾ ಜಾತಿಗಳ ವಸ್ತುಸ್ಥಿತಿ ತಿಳಿಯಲಿದೆ. ಆದರೆ, ಬಿಡುಗಡೆಗೂ ಮುನ್ನವೇ ವಿರೋಧಿಸುವುದು ಸರಿಯಲ್ಲ ಎಂದರು.

ವರದಿ ಜಾರಿಯಿಂದಾಗಿ ಎಲ್ಲ ಸಮುದಾಯಕ್ಕೂ ಒಂದಲ್ಲೊಂದು ರೀತಿ ಅನುಕೂಲವಾಗಲಿದೆ. ಅಲ್ಲದೆ, ಅದಕ್ಕೆ ಪೂರಕವಾಗಿ ಸರ್ಕಾರ ಕಾರ್ಯಕ್ರಮ ರೂಪಿಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಚ್.ಮಂಜಪ್ಪ, ಸಂಚಾಲಕರಾದ ದುರುಗೇಶಪ್ಪ, ಪ್ರಸನ್ನಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ನಿರಂಜನಮೂರ್ತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net