ಬೆಟ್ಟಳ್ಳಿ ಮಾರಮ್ಮ ದೇಗುಲದಲ್ಲಿ ವಿಶೇಷ ಪೂಜೆ

04 HANUR 1 A
ಶ್ರೀಬೆಟ್ಟಳ್ಳಿ ಮಾರಮ್ಮ ದೇವಿಯ ವಿಗ್ರಹ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಿರುವುದು.
Published on

ಹನೂರು: ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮನ ದೇಗುಲದಲ್ಲಿ ಆಷಾಢ ಮಾಸದ 3ನೇ ಮಂಗಳವಾರ ಅಂಗವಾಗಿ ದೇವಿಯ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು.

ದೇಗುಲವನ್ನು ವಿಶೇಷವಾಗಿ ಮಾವಿನಕಾಯಿ, ವಿವಿಧ ಪುಷ್ಪ ಹಾಗೂ ತಳಿರು ತೋರಣದಿಂದ ಸಿಂಗಾರ ಮಾಡಲಾಗಿತ್ತು. ಮುಂಜಾನೆ 4.30ರಲ್ಲಿ ದೇವಿಗೆ ಪನ್ನೀರು, ಎಳನೀರು, ಅರಿಶಿಣ, ಕುಂಕುಮ, ಜೇನುತುಪ್ಪ, ಹಾಲು, ಮೊಸರು ಹಾಗೂ ಗಂಧದ ಅಭಿಷೇಕ ನೆರವೇರಿಸಲಾಯಿತು. ಬಳಿಕ ವಿಗ್ರಹ ಮೂರ್ತಿಯನ್ನು ವಿವಿಧ ಚಿನ್ನಾಭರಣ ಹಾಗೂ ವಿವಿಧ ಪುಷ್ಪಗಳಿಂದ ಸಿಂಗರಿಸಿ ವಿಶೇಷ ಪೂಜೆ ನೆರವೇರಿಸಲಾಯಿತು. ಈ ವೇಳೆ ದೇವಿಗೆ ಪಂಚಾಮೃತ ಅಭಿಷೇಕ ಅರ್ಪಿಸಿ ಧೂಪಧಾರತಿ, ನಿಂಬೆಹಣ್ಣಿನ ಆರತಿ ಹಾಗೂ ಮಹಾ ಮಂಗಳಾರತಿ ಬೆಳಗಿಸಲಾಯಿತು. ಬಳಿಕ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಯಿತು.

ಪಟ್ಟಣ ಸೇರಿದಂತೆ ಭೈರನತ್ತ, ಉದ್ದನೂರು, ಮಾಲಾಪುರ, ಅಜ್ಜೀಪುರ, ಚಿಂಚಳ್ಳಿ, ಮಣಗಳ್ಳಿ, ಮಂಗಲ ಹಾಗೂ ಇತರೆಡೆಯಿಂದ ಆಗಮಿಸಿದ್ದ ಭಕ್ತರು ದೇವಿಯ ದರ್ಶನ ಪಡೆದರು. ಹರಕೆ ಹೊತ್ತ ಭಕ್ತರು ದೇಗುಲ ಮುಂಭಾಗದಲ್ಲಿ ಉಪ್ಪು ಸುರಿದು ದೇವಿ ಕೃಪೆಗೆ ಪಾತ್ರರಾದರು. ಅರ್ಚಕ ರಾಜೋಜಿರಾವ್ ಸಿಂಧೆ, ಜಯಂತ್‌ರಾವ್ ಸಿಂಧೆ, ಪೂಜಾ ಕೈಂಕರ್ಯ ನೆರವೇರಿಸಿದರು. ದೇಗುಲದ ವತಿಯಿಂದ ಅನ್ನ ಸಂತರ್ಪಣೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net