ಬೆಲೆ ಏರಿಕೆ ಖಂಡಿಸಿ ಯೂತ್ ಕಾಂಗ್ರೆಸ್ ಪ್ರತಿಭಟನೆ

Published on

ಹನೂರು: ಕೇಂದ್ರ ಸರ್ಕಾರದ ಬೆಲೆ ಏರಿಕೆಯನ್ನು ವಿರೋಧಿಸಿ ಗುರುವಾರ ಹನೂರಿನಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಕಾಂಗ್ರೆಸ್ ಕಚೇರಿಯ ಬಳಿ ನೆರೆದಿದ್ದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಮ.ಬೆಟ್ಟದ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯ ಮೂಲಕ ದಿವಂಗತ ಎಚ್.ನಾಗಪ್ಪ ಅವರ ವೃತ್ತದ ಬಳಿ ತೆರಳಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರ್ ಕಚೇರಿಗೆ ಆಗಮಿಸಿ ಮನವಿ ಪತ್ರ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಗುಂಡಾಪುರ ಮಾದೇಶ್ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೀನ ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರು ಪರ ಇಲ್ಲ. ಹಾಗಾಗಿ ಯಾವುದೇ ಉತ್ತಮ ಯೋಜನೆಗಳನ್ನು ಜಾರಿಗೊಳಿಸುತ್ತಿಲ್ಲ. ಈ ಮೂಲಕ ಅನ್ಯಾಯವೆಸಗುತ್ತಿದ್ದು, ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಈಗಿರುವಾಗ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ದರವನ್ನು ಹೆಚ್ಚಿಸಿದೆ. ಇದರಿಂದ ಆರ್ಥಿಕವಾಗಿ ಹಿಂದುಳಿದಿರುವ ಸಾಮಾನ್ಯ, ಮಧ್ಯಮ ವರ್ಗದ ಜನರು, ರೈತರು ಹಾಗೂ ದಿನಗೂಲಿ ನೌಕರರು ಜೀವನ ನಡೆಸುವುದೇ ಕಷ್ಟವಾಗಿದ್ದು, ತುಂಬಾ ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ಈ ಬಗ್ಗೆ ಮನದಟ್ಟು ಮಾಡಿಕೊಂಡು ಬೆಲೆ ಏರಿಕೆಯನ್ನು ಇಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಬ್ಲಾಕ್ ಅಧ್ಯಕ್ಷರಾದ ಹನೂರಿನ ಸಂಜಯ್, ರಾಮಾಪುರದ ರಮೇಶ್, ಟೌನ್ ಅಧ್ಯಕ್ಷ ಸಂತೋಷ್, ಜಿಲ್ಲಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜು, ಗ್ರಾಪಂ ಸದಸ್ಯರಾದ ಪ್ರಸಾದ್, ಕಾಂತರಾಜು, ಪದಾಧಿಕಾರಿಗಳಾದ ಕಾರ್ತಿಕ್ ರಾಜು, ದೇವರಾಜು ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net