ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

5manju2
ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಆರ್.ಪಿ. ಪಾಟೀಲ, ಪರಶುರಾಮ ವಗ್ಗಣ್ಣವರ ಇತರರು ಇದ್ದರು.
Published on

ಬೆಳಗಾವಿ: ದಿನ ಬಳಕೆ ವಸ್ತುಗಳು, ತೈಲ ಉತ್ಪನ್ನಗಳ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರದ ತಪ್ಪು ನಿರ್ಧಾರ ಹಾಗೂ ಅವೈಜ್ಞಾನಿಕ ಯೋಜನೆ, ಕಾಯ್ದೆಗಳಿಂದಾಗಿ ದೇಶದಲ್ಲಿ ಪೆಟ್ರೋಲ್, ಡೀಸಲ್, ಅಡುಗೆ ಎಣ್ಣೆ, ದಿನನಿತ್ಯ ಬಳಕೆ ಮಾಡುವ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದೆ. ಇದರಿಂದಾಗಿ ಕೂಲಿ ಕಾರ್ಮಿಕರು, ಬಡವರು, ಮಧ್ಯಮ ವರ್ಗದ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ, ಸರ್ಕಾರ ಮಾತ್ರ ದರ ಇಳಿಕೆಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಾರ್ಯಕರ್ತರು ದೂರಿದರು.

ಕರೊನಾ, ಲಾಕ್‌ಡೌನ್, ಅತಿವೃಷ್ಟಿ ಇನ್ನಿತರ ಕಾರಣಗಳಿಂದ ರೈತರು, ವ್ಯಾಪಾರಿಗಳು ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದಾರೆ. ಸಾವಿರ, ಲಕ್ಷ ರೂ. ಖರ್ಚು ಮಾಡಿ ಬೆಳೆದ ಬೆಳೆಗಳಿಗೆ ಮಾರುಕಟ್ಟೆಗಳಲ್ಲಿ ಸೂಕ್ತ ಬೆಲೆ ಸಿಗುತ್ತಿಲ್ಲ. ಸಂಕಷ್ಟದಲ್ಲಿರುವ ರೈತ ಸಮುದಾಯಕ್ಕೆ ಸೂಕ್ತವಾಗಿ ಸಹಕರಿಸದೆ ವಂಚಿಸುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಲಾಕ್‌ಡೌನ್‌ನಿಂದಾಗಿ ಜನರು ಆದಾಯವಿಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಎಲ್ಲರಿಗೂ ಉಚಿತವಾಗಿ ಲಸಿಕೆ ಹಾಕಿಸಲು ಕ್ರಮ ವಹಿಸಬೇಕು. ಪ್ರತಿದಿನ ಒಂದು ಕೋಟಿ ಜನರಿಗೆ ಉಚಿತ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಕರೊನಾ ಸೋಂಕಿತರಿಗೆ ಎಲ್ಲ ಆಸ್ಪತ್ರಗಳಲ್ಲಿ ಉಚಿತ ಚಿಕಿತ್ಸೆಗೆ ಕ್ರಮ ವಹಿಸಬೇಕು. ಈ ವಿಚಾರವಾಗಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಕೇಂದ್ರ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಆರ್.ಪಿ. ಪಾಟೀಲ, ಪರಶುರಾಮ ವಗ್ಗಣ್ಣವರ, ರಾಜೇಂದ್ರ ಪಾಟೀಲ, ಅನ್ನಪೂರ್ಣಾ ಅಸೂರಕರ, ಶಕೀಲ್ ಮುಲ್ಲಾ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net