

ಬೇಲೂರು: ತಾಲೂಕಿನ ಅರೇಹಳ್ಳಿ ಹೋಬಳಿಯ ನಂದಗೋಡನಹಳ್ಳಿ ಗ್ರಾಮದಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ದುಷ್ಕರ್ಮಿಗಳು ಕಡಿದಿರುವುದು ತಡವಾಗಿ ಬೆಳಗಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಹಸೀಲ್ದಾರ್ ಮಮತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅರೇಹಳ್ಳಿ ಹೋಬಳಿಯ ನಂದಗೋಡನಹಳ್ಳಿ ಗ್ರಾಮದ ಸರ್ವೆ ನಂಬರ್ 16ರ ಸರ್ಕಾರಿ ಭೂಮಿಯಲ್ಲಿ ಸುಮಾರು ಮುನ್ನೂರಕ್ಕೂ ಹೆಚ್ಚು ಸಾಗುವಾನಿ, ಹೊನ್ನೆ, ಬೀಟೆ, ಹಲಸು ಸೇರಿದಂತೆ ಇನ್ನಿತರ ಬೆಲೆಬಾಳುವ ಕಾಡು ಜಾತಿ ಮರಗಳನ್ನು ಕಡಿದು ಮಾರಣ ಹೋಮ ಮಾಡಲಾಗಿದೆ.
ನಂದಗೋಡನಹಳ್ಳಿಗೆ ಶನಿವಾರ ರೆವಿನ್ಯೂ ಇನ್ಸ್‌ಪೆಕ್ಟರ್ ಹಾಗೂ ಗ್ರಾಮಲೆಕ್ಕಿಗ ಹಕ್ಕುಪತ್ರ ನೀಡಲೆಂದು ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ತಿಳಿದು ಬಂದಿದ್ದು, ತಕ್ಷಣ ತಹಸೀಲ್ದಾರ್ ಮಮತಾ ಅವರಿಗೆ ವಿಚಾರ ತಿಳಿಸಿದ್ದಾರೆ. ವಿಚಾರ ತಿಳಿದ ಕೂಡಲೇ ತಹಸೀಲ್ದಾರ್ ಮಮತಾ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಬೆಲೆ ಬಾಳುವ ಸಾಗುವಾನಿ, ಹೊನ್ನೆ, ಬೀಟೆ, ಹಲಸು ಸೇರಿದಂತೆ ಮುಂತಾದ ಜಾತಿಯ ಮರಗಳನ್ನು ಕಡಿದು ಹಾಕಲಾಗಿದೆ. ತಪ್ಪಿಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇಷ್ಟೆಲ್ಲ ದೊಡ್ಡ ಪ್ರಮಾಣದಲ್ಲಿ ಅರಣ್ಯ ನಾಶವಾಗುತ್ತಿದ್ದರೂ ಸಹ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ತಮಗೆ ಏನೂ ಗೊತ್ತಿಲ್ಲದ ಹಾಗೇ ಕಣ್ಮುಚ್ಚಿ ಕುಳಿತಿರುವುದು ಸಾರ್ವಜನಿಕರಲ್ಲಿ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಈ ಅರಣ್ಯ ಪ್ರದೇಶದಲ್ಲಿ ಹಲವು ದಿನಗಳಿಂದ ಅರಣ್ಯಗಳ್ಳರು ದಿನನಿತ್ಯ ಸಾಗುವಾನಿ, ಹೊನ್ನೆ, ಬೀಟೆ ಸೇರಿದಂತೆ ಇನ್ನಿತರ ಬೆಲೆ ಬಾಳುವ ಮರಗಳನ್ನು ಕಡೆಯುತ್ತಿರುವುದು ಸಾಮಾನ್ಯವಾಗಿದೆ. ಕೆಲವು ಪ್ರಭಾವಿ ವ್ಯಕ್ತಿಗಳು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲಾಗಿ ಹಗಲಲ್ಲಿಯೇ ಕಳ್ಳ ಸಾಗಾಣಿಕೆ ಮಾಡುತ್ತಿದ್ದಾರೆ. ಆದರೆ ಈ ಅರಣ್ಯ ಇಲಾಖೆಯ ಅಧಿಕಾರಿಗಳಾಗಲಿ, ಪೊಲೀಸ್ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು, ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಗಮನಹರಿಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.