ಹುಬ್ಬಳ್ಳಿ: ಕೇರಳದಲ್ಲಿ ಕಳೆದ 25 ದಿನಗಳಿಂದ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಅಲ್ಲಿಯ ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಎಐಯುಟಿಯುಸಿ ಧಾರವಾಡ ಜಿಲ್ಲಾ ಸಮಿತಿ ಆಗ್ರಹಿಸಿದೆ.
ಮಾಸಿಕ ಗೌರವಧನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಕೇರಳದ ರಾಜಧಾನಿ ತಿರುವನಂತಪುರದ ಸಚಿವಾಲಯದ ಎದುರು ಆಶಾ ಕಾರ್ಯಕರ್ತೆಯರು ಹೋರಾಟ ನಡೆಸುತ್ತಿದ್ದಾರೆ. ಕೇರಳದಲ್ಲಿ ಅಧಿಕಾರದಲ್ಲಿರುವ ಸಿಪಿಐ(ಎಂ) ನೇತೃತ್ವದ ಎಡರಂಗ ಸರ್ಕಾರ ತನ್ನ ಹಠಮಾರಿ ಧೋರಣೆಯನ್ನು ಬಿಟ್ಟು ದುಡಿಯುವ ಮಹಿಳೆಯರಾದ ಆಶಾ ಕಾರ್ಯಕರ್ತೆಯರ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಪರಿಗಣಿಸಿ ಮಾತುಕತೆಗೆ ಮುಂದಾಗಬೇಕು ಎಂದು ಹೇಳಿದೆ.
ಬಿಜೆಪಿ ನೇತೃತ್ವದ ಕೇಂದ್ರ ಎನ್ಡಿಎ ಸರ್ಕಾರವು ಕಳೆದ 11 ವರ್ಷಗಳಿಂದ ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಜಾಣ ಕುರುಡುತನ ಪ್ರದರ್ಶಿಸುತ್ತ ಬಂದಿದ್ದು, ಮಹಿಳಾ ಕಾರ್ವಿುಕ ವಿರೋಧಿ ನಿಲುವನ್ನು ತಳೆದಿರುವುದನ್ನು ಕೂಡಾ ಇದೇ ಸಂದರ್ಭದಲ್ಲಿ ತೀವ್ರವಾಗಿ ಖಂಡಿಸುತ್ತೇವೆ ಎಂದಿದೆ.