

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ರಾಜ್ಯ ಪೌರಸೇವಾ ನೌಕರರ ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಸಹಾನುಭೂತಿಯಿದ್ದು, ಅವರ ಎಲ್ಲ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಹೇಳಿದರು. ವಿಧಾನ ಮಂಡಲ ಅಧಿವೇಶನ ನಡೆಯುತ್ತಿರುವ ಬೆಳಗಾವಿಯ ಸುವರ್ಣಸೌಧದ ಬಳಿ ಪೌರ ಸೇವಾ ನೌಕರರ ಸೇವಾ ಸಂಘದ ಆಶ್ರಯದಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮಂಗಳವಾರ ನಡೆಯುತ್ತಿದ್ದ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. 11,300 ಪೌರ ಕಾರ್ಮಿಕರ ಸೇವೆ ಕಾಯಂಗೆ ಸಂಬಂಧಿಸಿದ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಉಳಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇರೆಗೆ ಕರ್ತವ್ಯನಿರ್ವಹಿಸುತ್ತಿರುವ ವಾಟರ್‌ಮನ್, ಲೋಡರ್ಸ್, ಕ್ಲೀನರ್ಸ್, ವಾಹನ ಚಾಲಕರು ಹಾಗೂ ಇನ್ನಿತರರ ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಭರವಸೆ ನೀಡಿದರು. ಸೇವಾವಧಿಯಲ್ಲೇ ಮೃತರಾದ ಪೌರ ಕಾರ್ಮಿಕರ ಅವಲಂಬಿತರಿಗೆ ಉದ್ಯೋಗ ನೀಡುವುದು ಸೇರಿ ಪೌರ ಸೇವಾ ನೌಕರರ ಬೇಡಿಕೆಗಳ ಸಂಬಂಧ ಡಿ.22 ರಂದು ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ಕರೆಯಲಾಗಿದ್ದು, ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು ಎಂದು ತಿಳಿಸಿದರು.