

ಚಾಮರಾಜನಗರ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಕಾವು ತಾರಕಕ್ಕೇರಿದ್ದು, ಪ್ರಚಾರದಲ್ಲಿ ಪಾಲ್ಗೊಂಡಿರುವ ಜಿಲ್ಲೆಯ ರಾಜಕಾರಣಿಗಳು ಇಲ್ಲಿನ ಎಲೆಕ್ಷನ್ ಕುರಿತ ಚರ್ಚೆಗಳನ್ನು ಮತ್ತಷ್ಟು ರಂಗೇರಿಸಿದ್ದಾರೆ.
ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ಹೈವೋಲ್ಟೇಜ್ ಸೃಷ್ಟಿ ಮಾಡಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್, ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ, ಶಿಗ್ಗಾಂವಿಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಭರತ್ ಬೊಮ್ಮಾಯಿ, ಕಾಂಗ್ರೆಸ್‌ನಿಂದ ಯಾಸಿರ್ ಖಾನ್ ಪಠಾಣ, ಸಂಡೂರಿನಲ್ಲಿ ಕಾಂಗ್ರೆಸ್‌ನಿಂದ ಅನ್ನಪೂರ್ಣ ತುಕಾರಾಮ್, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಂಗಾರು ಹನುಮಂತು ಸ್ಪರ್ಧಾ ಕಣದಲ್ಲಿದ್ದಾರೆ.
ಅಭ್ಯರ್ಥಿಗಳ ಪರ ಘಟಾನುಘಟಿ ನಾಯಕರು ಚುನಾವಣಾ ಪ್ರಚಾರ ಮಾಡುತ್ತಿದ್ದು, ಜಿಲ್ಲೆಯ ಶಾಸಕರು, ರಾಜಕೀಯ ನಾಯಕರೂ ಪ್ರಚಾರದಲ್ಲಿ ತೊಡಗಿ ಪಕ್ಷದ ಪರ ಮತಯಾಚನೆ ನಡೆಸಿದ್ದಾರೆ. ಇದು ಜಿಲ್ಲೆಯಲ್ಲಿ ನಡೆಯುತ್ತಿರುವ ರಾಜಕೀಯ ಚರ್ಚೆಗಳಿಗೆ ಸರಕು ನೀಡಿದೆ. ದಿನನಿತ್ಯದ ಬೆಳವಣಿಗೆಗಳ ಗಮನ ಸೆಳೆದು, ಲಿತಾಂಶದ ಬಗ್ಗೆ ಕುತೂಹಲ ಹೆಚ್ಚಿಸುತ್ತಿದೆ.
ಕ್ಯಾಂಪೇನ್ ಅಂಗಳದಲ್ಲಿ: ಉಪ ಚುನಾವಣೆ ಪ್ರಚಾರ ಕಣದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪಾಲ್ಗೊಂಡು ಮತಯಾಚನೆ ನಡೆಸಿದ್ದಾರೆ. ಆಡಳಿತಾರೂಢ ಪಕ್ಷ ಕಾಂಗ್ರೆಸ್‌ದಿಂದ ಕೆಲವು ದಿನಗಳ ಹಿಂದೆಯಷ್ಟೇ ಗುಂಡ್ಲುಪೇಟೆ ಕ್ಷೇತ್ರದ ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಚನ್ನಪಟ್ಟಣದಲ್ಲಿ ಪ್ರಚಾರ ನಡೆಸಿದ್ದರು. ಇನ್ನು ಎಂಎಸ್‌ಐಎಲ್ ನಿಗಮದ ಅಧ್ಯಕ್ಷ ಮತ್ತು ಚಾಮರಾಜನಗರ ಕ್ಷೇತ್ರದ ಸಿ.ಪುಟ್ಟರಂಗಶೆಟ್ಟಿ ಶಿಗ್ಗಾಂವಿಗೆ ತೆರಳಿ ಅಭ್ಯರ್ಥಿ ಪರವಾಗಿ ಮತಯಾಚನೆ ನಡೆಸಿದರು. ಎನ್‌ಡಿಎ ಅಭ್ಯರ್ಥಿ ಪರವಾಗಿ ಮಾಜಿ ಶಾಸಕ ಎಸ್.ಬಾಲರಾಜು ಮತಯಾಚನೆ ನಡೆಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಜಿ.ಎನ್.ನಂಜುಂಡಸ್ವಾಮಿ ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದಾರೆ. ಪಕ್ಷದಲ್ಲಿ ಪ್ರಮುಖ ಸ್ಥಾನದಲ್ಲಿರುವ ಮುಖಂಡರೂ ಉಪ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ.
ಮಂಗಾಡಹಳ್ಳಿ ಅಳಿಯ ಎಆರ್‌ಕೆ:
ಚನ್ನಪಟ್ಟಣ ಉಪಚುನಾವಣೆಯಲ್ಲಿ ನಮ್ಮೂರು ಶಾಸಕ, ಆ ಊರಿನ ಅಳಿಯ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಪತ್ನಿ ಮಂಜುಳಾ ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದವರು. ಹೀಗಾಗಿ ಈ ಊರಿನ ಅಳಿಯನಿಂದ ಚುನಾವಣಾ ಪ್ರಚಾರ ನಡೆಯುತ್ತಿದೆ. ಮಾಜಿ ಸಂಸದ ಡಿ.ಕೆ.ಸುರೇಶ್ ಚುನಾವಣಾ ಪ್ರಚಾರದ ಭಾಷಣದ ವೇಳೆ ಮತದಾರರಿಗೆ ಎ.ಆರ್.ಕೃಷ್ಣಮೂರ್ತಿ ಅವರನ್ನು ‘ನಿಮ್ಮೂರ ಅಳಿಯ’ ಎಂದು ಹೇಳಿದ್ದರು. ಚನ್ನಪಟ್ಟಣ ಕ್ಷೇತ್ರದೊಂದಿಗೆ ಎ.ಆರ್.ಕೃಷ್ಣಮೂರ್ತಿ ಕೌಟುಂಬಿಕ ಸಂಬಂಧವನ್ನು ಮಾತ್ರ ಹೊಂದಿಲ್ಲ. ಈ ಹಿಂದೆ ಕೆಲವು ಚುನಾವಣೆಗಳಲ್ಲೂ ಪ್ರಚಾರದಲ್ಲಿ ಪಾಲ್ಗೊಂಡು ಕ್ಷೇತ್ರ ಪರಿಚಯವನ್ನು ಹೊಂದಿದ್ದಾರೆ. ಪ್ರಸ್ತುತ ಚನ್ನಪಟ್ಟಣ ಕ್ಷೇತ್ರದ ಅಕ್ಕೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ. 4-5 ಜನ ಶಾಸಕರು ಇರುವ ಇವರ ತಂಡವನ್ನು ಟೀಂ ಲೀಡರ್ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುನ್ನಡೆಸುತ್ತಿದ್ದಾರೆ.
ಅಖಾಡದಲ್ಲಿ ಹನೂರು ಎಂಎಲ್‌ಎ:
ಚನ್ನಪಟ್ಟಣ ವಿಧಾನಸಭಾ ಕ್ಷೇತದ ಅಕ್ಕೂರು ಜಿಪಂ ವ್ಯಾಪ್ತಿಯಲ್ಲಿ ಹನೂರು ಜೆಡಿಎಸ್ ಶಾಸಕ ಎಂ.ಆರ್.ಮಂಜುನಾಥ್ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಪಕ್ಷ ಈ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೆಲವು ಬೂತ್‌ಗಳನ್ನು ಶಾಸಕ ಎಂ.ಆರ್.ಮಂಜುನಾಥ್ ಅವರಿಗೆ ವಹಿಸಿದ್ದು, ವಿವಿಧ ಸಮುದಾಯಗಳ ಮತದಾರರು ಇಲ್ಲಿದ್ದಾರೆ. ಇವರ ಮತಗಳನ್ನು ಸೆಳೆಯುವ ಜವಾಬ್ದಾರಿಯನ್ನು ಎಂ.ಆರ್.ಮಂಜುನಾಥ್ ಹೊತ್ತಿದ್ದಾರೆ. ಕಳೆದ 10 ದಿನಗಳಿಂದ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ. ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಹಳ್ಳಿ ಹಳ್ಳಿ ಸುತ್ತುತ್ತಿದ್ದಾರೆ. ಶಾಸಕರೊಂದಿಗೆ ಹನೂರು ಕ್ಷೇತ್ರದ ಮುಖಂಡರು, ಕಾರ್ಯಕರ್ತರೂ ಚನ್ನಪಟ್ಟಣಕ್ಕೆ ತೆರಳಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಪ್ರಚಾರದ ವೇಳೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ.
ಸಂಡೂರು ಕದನ
ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕದನ ಕಣಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಇಳಿದಿದ್ದಾರೆ. ಕ್ಷೇತ್ರದಲ್ಲೇ ಇದ್ದುಕೊಂಡು ವ್ಯಾಪಕ ಪ್ರಚಾರ ನಡೆಸಿದ್ದಾರೆ. ಪಕ್ಷದ ಪ್ರಮುಖ ನಾಯಕರೊಂದಿಗೆ ಅಭ್ಯರ್ಥಿ ಪರ ಮತಬೇಟೆ ನಡೆಸಿದ್ದಾರೆ. ಗ್ಯಾರಂಟಿ ಯೋಜನೆ, ಗಣಿಗಾರಿಕೆ ಕುರಿತು ಚರ್ಚೆಗಳು ನಡೆದಿವೆ. ಇವುಗಳ ಮಧ್ಯೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಕಾಂಗ್ರೆಸ್ ವಿರುದ್ಧ ಎಸ್‌ಇಪಿ/ಟಿಎಸ್‌ಪಿ ಅನುದಾನ ಬಳಕೆ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಿದ್ದಾರೆ.