

ಹಾಸನ: ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ರಾಮನಾಥಪುರದ ನಿವಾಸಿ ನಿಂಗೇಗೌಡ (55) ಮೃತ ವ್ಯಕ್ತಿ.
ನಿಂಗೇಗೌಡ ಅವರು ಮನೆಗೆ ಸಾಮಾನು ತರಲು ಮನೆಯಿಂದ ರಾಮನಾಥಪುರ ಸರ್ಕಲ್‌ಗೆ ಬೈಕ್ ಚಾಲನೆ ಮಾಡಿಕೊಂಡು ಹೋಗುವಾಗ ಎದುರುಗಡೆಯಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಮಾಡಿದ ರಭಸಕ್ಕೆ ರಸ್ತೆಯ ಮೇಲೆ ಬಿದ್ದ ನಿಂಗೇಗೌಡರ ತಲೆಗೆ ಪೆಟ್ಟು ಬಿದ್ದು ಕಿವಿಯಲ್ಲಿ ರಕ್ತಸ್ರಾವವಾಗಿದೆ. ಕೂಡಲೇ ಅವರಿಗೆ ಕೊಣನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಸರ್ಕಾರಿ ಆಸ್ಪತ್ರೆಗೆ ನಂತರ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅದೇ ದಿನ ಮಧ್ಯರಾತ್ರಿ ನಿಂಗೇಗೌಡರು ಮೃತಪಟ್ಟಿದ್ದಾರೆ. ಅಪಘಾತಕ್ಕೆ ಕಾರಣನಾಗಿರುವ ಬೈಕ್ ಚಾಲಕನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಮೃತರ ಸಂಬಂಧಿ ಕೊಣನೂರು ಪೊಲೀಸ್ ಠಾಣೆಗೆ ಮಂಗಳವಾರ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.