ಬ್ಯಾಂಕಿನ ಏಳಿಗೆಗಾಗಿ ಶ್ರಮಿಸಿ

27.05.2020 SDLP 01
Published on

ಶಿಡ್ಲಘಟ್ಟ  : ಆರ್ಥಿಕ ಸಂಕಷ್ಟದ ನಡುವೆ ಡಿಸಿಸಿ ಬ್ಯಾಂಕಿನಿಂದ ಮಹಿಳಾ ಸ್ವ ಸಹಾಯ ಸಂಘಗಳಿಗೆ ವಿತರಣೆ ಮಾಡುತ್ತಿರುವ ಬಡ್ಡಿರಹಿತ ಸಾಲ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ನಿಗದಿತ ಸಮಯದಲ್ಲಿ ಮರುಪಾವತಿ ಮಾಡುವ ಮೂಲಕ ಸಹಕಾರಿ ಕ್ಷೇತ್ರದ ಬಲವರ್ಧನೆಗೆ ಸಹಕರಿಸಬೇಕು ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.

ನಗರದ ಡಾಲ್ಫಿನ್ ಶಾಲಾ ಆವರಣದಲ್ಲಿ ಶಿಡ್ಲಘಟ್ಟ ಟೌನ್ ರೇಷ್ಮೆ ಬೆಳೆಗಾರರ ಹಾಗೂ ರೈತರ ವ್ಯವಸಾಯ ಸೇವಾ ಸಹಕಾರ ಸಂಘದ ಸ್ವಸಹಾಯ ಸಂಘಗಳಿಗೆ ಸಾಲ ವಿತರಿಸಿ ಮಾತನಾಡಿದರು.ಸಂಕಷ್ಟದ ಪರಿಸ್ಥಿತಿಯಲ್ಲಿ ನಬಾರ್ಡ್ ನಿಂದ ಹಣ ತಂದು ಸ್ವ ಸಹಾಯ ಸಂಘಗಳಿಗೆ ಬಡ್ಡಿ ರಹಿತ ಸಾಲ ವಿತರಣೆ ಮಾಡಲಾಗುತ್ತಿದೆ. ಇಂತಹ ಸೂಕ್ಷ್ಮ ಪರಿಸ್ಥಿತಿಯನ್ನು ಮಹಿಳೆಯರು ಅರ್ಥ ಮಾಡಿಕೊಳ್ಳಬೇಕು, ಪಡೆದುಕೊಂಡ ಸಾಲವನ್ನು ಸದ್ಭಳಕೆ ಮಾಡಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗುವ ಜತೆಗೆ ಮಹಿಳೆಯರು ಉಳಿತಾಯದ ಹಣವನ್ನೂ ಡಿಸಿಸಿ ಬ್ಯಾಂಕಿನಲ್ಲಿ ಠೇವಣಿ ಇಡುವ ಮೂಲಕ ಬ್ಯಾಂಕಿನ ಏಳಿಗೆಗಾಗಿ ಶ್ರಮಿಸಬೇಕು ಎಂದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ಮಾತನಾಡಿ, ಮಹಿಳಾ ಸ್ವಸಹಾಯ ಸಂಘಗಳಿಗೆ ಆರ್ಥಿಕ ಚೈತನ್ಯ ತುಂಬುವುದರ ಜತೆಗೆ ಬಡ್ಡಿ ಮಾಫಿಯಾದಿಂದ ಅವರನ್ನು ಪಾರು ಮಾಡಲು ಬಡ್ಡಿರಹಿತ ಸಾಲ ವಿತರಣೆ ಮಾಡುತ್ತಿದ್ದೇವೆ. ಇದರ ಉಪಯೋಗವಾಗಬೇಕು. ಮಹಿಳೆಯರು ಸ್ವಾವಲಂಬಿಗಳಾಗಬೇಕು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿ ಮಾಡಬೇಕು ಎಂದು ತಿಳಿಸಿದರು.ಶಿಡ್ಲಘಟ್ಟ ಟೌನ್ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಸುಮಾರು 42 ಸ್ವಸಹಾಯ ಸಂಘಗಳಿಗೆ 2 ಕೋಟಿ 25 ಲಕ್ಷ ಬಡ್ಡಿರಹಿತ ಸಾಲ ವಿತರಣೆ ಮಾಡಲಾಯಿತು.

ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್, ಚಿಂತಾಮಣಿ ನಿರ್ದೇಶಕ ನಾಗರೆಡ್ಡಿ, ಟೌನ್ ರೇಷ್ಮೆ ಬೆಳೆಗಾರರ ಹಾಗೂ ರೈತರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಬಿ.ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ರಾಮಚಂದ್ರಪ್ಪ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಆನಂದ್, ಟೌನ್ ಎಸ್ ಎಫ್ ಸಿ ಎಸ್ ಕಾರ್ಯನಿರ್ವಹಣಾಧಿಕಾರಿ ದೇವಿಕ, ಮಳ್ಳೂರು ಎಸ್ ಎಫ್ ಸಿ ಎಸ್ ಅಧ್ಯಕ್ಷ ಜಿ.ಎಂ.ರಾಮರೆಡ್ಡಿ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net