

ಹನೂರು: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡ ಸತ್ತೇಗಾಲದ ಮುಕುಂದವರ್ಮ ಅವರಿಗೆ ಶಾಸಕ ಆರ್.ನರೇಂದ್ರ ಭಾನುವಾರ ಪಟ್ಟಣದ ಪಕ್ಷದ ಕಚೇರಿಯಲ್ಲಿ ಬಾವುಟ ನೀಡುವುದರ ಮೂಲಕ ಜವಾಬ್ದಾರಿ ವಹಿಸಿದರು.
ಈ ವೇಳೆ ಶಾಸಕ ಆರ್.ನರೇಂದ್ರ ಮಾತನಾಡಿ, ಕಳೆದ 8 ವರ್ಷದಿಂದ ಇಕ್ಕಡಹಳ್ಳಿ ಗ್ರಾಮದ ಕೆಂಪಯ್ಯ ಹನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಆದರೆ ಕೋವಿಡ್‌ನಿಂದ ಮೃತಪಟ್ಟರು. ತೆರವಾದ ಸ್ಥಾನಕ್ಕೆ ಸಿಂಗಾನಲ್ಲೂರಿನ ಜಿಪಂ ಮಾಜಿ ಉಪಾಧ್ಯಕ್ಷ ದೇವರಾಜು ಅವರನ್ನು ನೇಮಕ ಮಾಡಲಾಗಿತ್ತು. ದುರದೃಷ್ಟವಶಾತ್ ಅಪಘಾತದಿಂದ ಮೃತಪಟ್ಟರು. ಕೆಲವು ಕಾರಣದಿಂದ ಅಧ್ಯಕ್ಷರನ್ನು ನೇಮಕ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಚುನಾವಣೆ ಸಮೀಪಿಸುತ್ತಿರುವುದರಿಂದ ಪಕ್ಷ ಸಂಘಟನೆಯನ್ನು ಅರಿತು ಮುಕುಂದ ವರ್ಮ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದರು.
ಮುಕುಂದವರ್ಮ ಮಾತನಾಡಿ, ನನ್ನನ್ನು ಅಧ್ಯಕ್ಷರಾಗಿ ನೇಮಕ ಮಾಡುವುದರ ಮೂಲಕ ಪಕ್ಷದಲ್ಲಿ ಹೆಚ್ಚಿನ ಜವಾಬ್ದಾರಿಯನ್ನು ನೀಡಿದ್ದಾರೆ. ಕಾರ್ಯಕರ್ತರು ಹಾಗೂ ಮುಖಂಡರ ಸಹಕಾರ ಪಡೆದು ಪಕ್ಷದ ಸಂಘಟನೆಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದರು.
ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ಬಳಿಕ ಪ್ರಜಾಧ್ವನಿ ಯಾತ್ರೆ ಸಂಬಂಧ ನಡೆದ ಕಾರ್ಯಕರ್ತರು ಹಾಗೂ ಮುಖಂಡರ ಪೂರ್ವ ಸಭೆಯಲ್ಲಿ ಶಾಸಕ ಆರ್.ನರೇಂದ್ರ ಮಾತನಾಡಿ, ಚುನಾವಣೆ ಸಮೀಪಿಸುತ್ತಿರುವುದರಿಂದ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನರಿಗೆ ಮನದಟ್ಟು ಮಾಡುವ ಸಲುವಾಗಿ ಫೆ.21ರಂದು ಪಟ್ಟಣದ ಆರ್.ಎಸ್.ದೊಡ್ಡಿ ಗೌರಿಶಂಕರ ಕಲ್ಯಾಣ ಮಂಟಪದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಆಯೋಜಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಆರ್.ಧ್ರುವನಾರಾಯಣ್ ಸೇರಿದಂತೆ ಪಕ್ಷದ ನಾಯಕರು ಆಗಮಿಸಲಿದ್ದಾರೆ.
ಆದ್ದರಿಂದ ಕ್ಷೇತ್ರದ ಜಿಪಂ, ತಾಪಂ, ಗ್ರಾಪಂ ಜನಪ್ರತಿನಿಧಿಗಳು, ವಿವಿಧ ಘಟಕದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಸ್ವಾಮಿ, ರಾಮಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಜಿಪಂ ಉಪಾಧ್ಯಕ್ಷ ಬಸವರಾಜು, ತಾಪಂ ಮಾಜಿ ಅಧ್ಯಕ್ಷ ಮುರುಡೇಶ್ವರಸ್ವಾಮಿ, ಪಪಂ ಉಪಾಧ್ಯಕ್ಷ ಗಿರೀಶ್, ಮಾಜಿ ಉಪಾಧ್ಯಕ್ಷ ಬಸವರಾಜು, ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಮಾದೇಶ್, ಮಹಿಳಾ ಘಟಕದ ಅಧ್ಯಕ್ಷೆ ಅತಿಯಾ ಬೇಗಂ, ಗ್ರಾಪಂ ಅಧ್ಯಕ್ಷೆ ಸುಧಾ ಹಾಗೂ ಇನ್ನಿತರರು ಇದ್ದರು.