

ಹೊಸದುರ್ಗ: ಹಿಂದುಳಿದ ಉಪ್ಪಾರ ಸಮುದಾಯದಲ್ಲಿ ಶೈಕ್ಷಣಿಕ ಜಾಗೃತಿ ಮೂಡಿಸುವ ಉದ್ದೇಶದಿಂದ ಸೆ.3ರಂದು ಭಗೀರಥ ಗುರುಪೀಠದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದೆ ಎಂದು ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ತಿಳಿಸಿದರು.
ತಾಲೂಕಿನ ಬ್ರಹ್ಮವಿದ್ಯಾ ನಗರದ ಶ್ರೀ ಭಗೀರಥ ಗುರುಪೀಠದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ದ್ವಿತೀಯ ಪಿಯುಸಿ, ಎಸ್‌ಎಸ್‌ಎಲ್‌ಸಿ ಹಾಗೂ ಉನ್ನತ ವ್ಯಾಸಂಗದಲ್ಲಿ ಅತಿ ಹೆಚ್ಚು ಅಂಕ ಪಡೆದು ಸಾಧನೆ ಮಾಡಿರುವ ರಾಜ್ಯ ಉಪ್ಪಾರ ಸಮಾಜದ ಪ್ರತಿಭೆಗಳನ್ನು ಗುರುಪೀಠಕ್ಕೆ ಕರೆದು ಆಶೀರ್ವಾದ ನೀಡುವ ಮೂಲಕ ಅವರನ್ನು ಸಮಾಜದ ಆಸ್ತಿಯಾಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಪ್ರತಿಭಾ ಪರಸ್ಕಾರ ಕಾರ್ಯಕ್ರಮದ ಜೊತೆಗೆ ವಿಶೇಷ ಸಾಧಕರನ್ನು ಅಭಿನಂದಿಸಲಾಗುವುದು. ಶ್ರೀಪೀಠದ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ವನ ಮಹೋತ್ಸವ ಆಚರಿಸಲಾಗುವುದು ಎಂದು ತಿಳಿಸಿದರು.
ವಿಧಾನ ಸಭಾಪತಿ ಯು.ಟಿ.ಖಾದರ್ ಉದ್ಘಾಟಿಸುವರು. ರಾಜ್ಯ ಉಪ್ಪಾರ ಸಂಘದ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಚಿವರಾದ ಡಿ.ಸುಧಾಕರ್, ಸತೀಶ್ ಜಾರಕಿಹೊಳಿ, ಎಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ, ಶಿವರಾಜ್ ತಂಗಡಗಿ, ಮಧು ಬಂಗಾರಪ್ಪ, ಶಾಸಕ ಬಿ.ಜಿ.ಗೋವಿಂದಪ್ಪ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದರು.
ರಾಜ್ಯದ ಎಲ್ಲ ಜಿಲ್ಲೆಯಿಂದಲೂ ಕಾರ್ಯಕ್ರಮಕ್ಕೆ ಸಾಧಕರು ಹಾಗೂ ಭಕ್ತರು ಆಗಮಿಸಲಿದ್ದು ಪ್ರತಿ ವರ್ಷ ಕಾರ್ಯಕ್ರಮ ಆಯೋಜಿಸುವ ಮೂಲಕ ಸಮುದಾಯವನ್ನು ಶೈಕ್ಷಣಿಕವಾಗಿ ಬಲಪಡಿಸುವ ಪ್ರಯತ್ನಕ್ಕೆ ಮುನ್ನುಡಿ ಬರೆಯಲಾಗುತ್ತಿದೆ ಎಂದರು.
ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಮಾತನಾಡಿ, ರಾಜ್ಯಮಟ್ಟದಲ್ಲಿ ಸಾಧನೆ ಮಾಡಿದ ಪ್ರತಿಭೆಗಳನ್ನು ಗುರುತಿಸಿ ಸನ್ಮಾನಿಸುವ ಮೂಲಕ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಶ್ರೀಮಠದಿಂದ ಪ್ರೋತ್ಸಾಹಿಸಲಾಗುತ್ತಿದೆ ಎಂದರು.