

ಮದ್ದೂರು: ತಾಲೂಕಿನ ವಳಗೆರೆಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರಿ ಮಳೆಗೆ ಹೆಬ್ಬಳಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದ ಪರಿಣಾಮ ಭತ್ತ, ಕಬ್ಬು ಬೆಳೆ ಹಾಗೂ ತೆಂಗಿನ ಮರಗಳು ಜಲಾವೃತವಾಗಿವೆ.
ಕೆಲ ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಈವರೆಗೆ ಸುಮಾರು 8 ಬಾರಿ ಜಮೀನುಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಸುಮಾರು 900 ಎಕೆರೆ ಪ್ರದೇಶದಲ್ಲಿ ನಾಟಿ ಮಾಡಿದ್ದ ಭತ್ತದ ಪೈರು, ಕಬ್ಬು ಸೇರಿದಂತೆ ಇತರ ಬೆಳೆಗಳು ಸಂಪೂರ್ಣ ಜಲಾವೃತವಾಗಿವೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಸಂಘದ ಮೂಲ ಸಂಘಟನೆಯ ತಾಲೂಕು ಅಧ್ಯಕ್ಷ ವಿ.ಸಿ.ಉಮೇಶ್, ಗ್ರಾಮಸ್ಥರಾದ ರಾಜೇಶ್, ದಯಾನಂದ್, ಶ್ರೀನಿವಾಸ್ ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಟಿ.ಎನ್.ನರಸಿಂಹಮೂರ್ತಿ, ಕಾವೇರಿ ನೀರಾವರಿ ನಿಗಮದ ಎಇ ಎಚ್.ಎನ್.ನಾಗರಾಜು, ಜಂಟಿ ಕೃಷಿ ನಿರ್ದೇಶಕ ಅಶೋಕ್, ಎಡಿಎ ರೂಪಾ ಸೇರಿದಂತೆ ಇತರ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು.